ಹೊಸದಿಲ್ಲಿ: ಅಮಾನತುಗೊಂಡ ಜೆಡಿಎಸ್ ನಾಯಕ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ನ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯೊಬ್ಬರ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ(ಸೆ20) ಎರಡು ವಾರಗಳ ಕಾಲ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಬಾಲಾಜಿ ಶ್ರೀನಿವಾಸನ್ ಅವರಿಗೆ ಪ್ರಕರಣದ ಸ್ಥಿತಿಯ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದೆ.
ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ, ಇತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಮತ್ತು ಭವಾನಿ ರೇವಣ್ಣ ತನಿಖೆಗೆ ಸಹಕರಿಸಿದ್ದಾರೆ ಎಂದು ಶ್ರೀನಿವಾಸನ್ ವಾದ ಮಂಡಿಸಿದರು. ಪ್ರಕರಣದ ಮೆರಿಟ್‌ಗೆ ಹೋಗುವುದಿಲ್ಲ ಎಂದು ಹೇಳಿದ ಪೀಠ, ಶ್ರೀನಿವಾಸನ್ ಅವರಿಗೆ ಅಫಿಡವಿಟ್ ಸಲ್ಲಿಸುವಂತೆ ಹೇಳಿ ಎರಡು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಜುಲೈ 10 ರಂದು, ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.ರಾಜ್ಯ ಸರಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿತ್ತು.
ಜೂನ್ 18 ರಂದು ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ತನಿಖೆಯ ಸಮಯದಲ್ಲಿ ಅವರು ಈಗಾಗಲೇ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಒತ್ತಿಹೇಳಿ, ಮಗನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ಎಸ್‌ಐಟಿಗೆ ಸಹಕರಿಸುತ್ತಿಲ್ಲ ಎಂದು ಹೇಳುವುದು ಅನ್ಯಾಯವಾಗಿದೆ ಎಂದಿತ್ತು.
ಮೈಸೂರು ಜಿಲ್ಲೆಯ ಕೆಆರ್ ನಗರದ ಮನೆ ಕೆಲಸದಾಕೆಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಎಸ್‌ಐಟಿ ಭವಾನಿ ರೇವಣ್ಣ ಅವರನ್ನು ಕಸ್ಟಡಿಗೆ ಕೋರಿತ್ತು.