ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮುದಾಯ ಇನ್ನು ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರಲಿದೆ. ಮೊಗೇರ ಸಮುದಾಯ ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರುತ್ತದೆ ಎಂದು ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ರಂಜನ್ ಗೊಗೋಯ್ ಮತ್ತು ನ್ಯಾ. ನವೀನ್ ಸಿನ್ಹಾ ಅವರಿದ್ದ ವಿಭಾಗೀಯ ಪೀಠ, ಮೊಗೇರರು ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರುತ್ತಾರೆಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ನೀಡಿದ್ದ ವರದಿ ಆಧರಿಸಿ ಅರ್ಜಿ ಇತ್ಯರ್ಥಗೊಳಿಸಿತು.
ಇದರಿಂದಾಗಿ ಮೊಗೇರ ಸಮುದಾಯ ಪರಿಶಿಷ್ಟ ಜಾತಿಗೆ ಸೇರಿದೆ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿಹಿಡಿದಂತಾಗಿದೆ. ಆದರೆ, ಮೊಗೇರರು ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರುತ್ತಾರೆಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ನೀಡಿದ್ದ ವರದಿಯನ್ನು ಪ್ರಶ್ನಿಸಲು ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ.
ಪ್ರಕರಣವೇನು?: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಚಿಕ್ಕ ಸಮುದಾಯವಾಗಿರುವ ಮೊಗೇರರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂಬುದು ಹಿಂದಿನಿಂದಲೂ ಇದ್ದ ಬೇಡಿಕೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮೊಗೇರರನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿತ್ತಾದರೂ ಉತ್ತರ ಕನ್ನಡ ಜಿಲ್ಲೆಯ ಮೊಗೇರರಿಗೆ ಈ ಸೌಲಭ್ಯ ಸಿಕ್ಕಿರಲಿಲ್ಲ.
ಆದ್ದರಿಂದ ಉತ್ತರ ಕನ್ನಡ ಜಿಲ್ಲಾ ಮೊಗೇರ ಸಂಘ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ತೀರ್ಪು ನೀಡಿದ್ದ ಹೈಕೋರ್ಟ್, ಮೊಗೇರರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಮೊಗೇರ ಜಾತಿ ಕುರಿತಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದಿಂದ ಮಾಹಿತಿ ಕೇಳಿತ್ತು.
ಅದರಂತೆ ಕಳೆದ ಆ.3ರಂದು ಮಾಹಿತಿ ನೀಡಿದ್ದ ಆಯೋಗ, ಮೊಗೇರ ಸಮುದಾಯ ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿತ್ತು. ಈ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಆಯೋಗದ ವರದಿಯನ್ನು ಪ್ರಶ್ನಿಸುವುದಿದ್ದರೆ ಅದಕ್ಕೆ ಅವಕಾಶವಿದೆ ಎಂದು ಹೇಳಿದೆ. ಇದರಿಂದಾಗಿ ಮೊಗೇರ ಸಮುದಾಯ ಪರಿಶಿಷ್ಟ ಜಾತಿಗೆ ಬರುವಂತಾಗಿದೆ.