Advertisement

ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣ ; ಶಿಕ್ಷೆ ಪ್ರಮಾಣ ಹೆಚ್ಚಬೇಕು: ಸಿಎಂ ಯಡಿಯೂರಪ್ಪ

10:56 PM Nov 11, 2020 | mahesh |

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣ ಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

Advertisement

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ಏರ್ಪಡಿಸಿದ್ದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ. 5 ರಿಂದ 6ರಷ್ಟಿದೆ. ಇದರ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್‌ ಅಧಿಕಾರಿಗಳು ಎಫ್‌.ಐ.ಆರ್‌. ದಾಖಲಿಸಿ, 60 ದಿನಗಳೊಳಗೆ ತನಿಖೆ ಮುಗಿಸಿ ಆರೋಪಪಟ್ಟಿ ಸಲ್ಲಿಸಬೇಕು. ಪ್ರಮುಖವಾಗಿ ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಜಾಗರೂಕತೆ ವಹಿಸಬೇಕು. ಸಾಕ್ಷಿಧಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.

ವೀಡಿಯೋ ಚಿತ್ರೀಕರಣ
ಪ್ರಸ್ತುತ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗುತ್ತಿದೆ. ಸಂತ್ರಸ್ತರು ದೂರು ನೀಡುವಾಗಲೂ ವೀಡಿಯೋ ಚಿತ್ರೀಕರಣ ನಡೆಸಬೇಕು ಎಂದು ಸೂಚಿಸಿದರು.

ನ್ಯಾಯಬೆಲೆ ಅಂಗಡಿ
ಕನಿಷ್ಠ 100 ಪಡಿತರ ಚೀಟಿದಾರರಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾಲನಿ ಹಾಗೂ ತಾಂಡಾ ಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

“ಸ್ತ್ರೀಯರ ಬಗೆಗಿನ ದೃಷ್ಟಿಕೋನ ಬದಲಾಗಲಿ’
ಬೆಂಗಳೂರು: ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕು. ಮಹಿಳೆಯರ ಸುರಕ್ಷೆ ಎಲ್ಲರ ಜವಾಬ್ದಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.ವಿಧಾನಸೌಧದ ಮುಂಭಾಗದಲ್ಲಿ ನಿರ್ಭಯ ಯೋಜನೆಯಡಿ ಮಾನವ ಕಳ್ಳಸಾಗಣೆ ನಿಷೇಧ ದಳ ಸಿಬಂದಿಗೆ 751 ಬೈಕುಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಮಹಿಳಾ ಸುರಕ್ಷೆಯಲ್ಲಿ ನಮ್ಮ ರಾಜ್ಯ ಸದಾ ಮೊದಲ ಸ್ಥಾನದಲ್ಲಿರಬೇಕು ಎಂದರು.

ಎಲ್ಲ ಠಾಣೆಗಳಲ್ಲೂ ಸಹಾಯವಾಣಿ
ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ರಾಜ್ಯವು ದೇಶ ದಲ್ಲೇ ಉತ್ತಮ ಸ್ಥಾನದಲ್ಲಿದೆ. ಮಾನವ ಕಳ್ಳಸಾಗಣೆ ತಡೆ ಯುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ನಿರ್ಭಯ ಯೋಜನೆಯಡಿ ಮಾನವ ಕಳ್ಳ ಸಾಗಣೆ ತಡೆಯಲು ಸಹಾಯವಾಣಿ ಆರಂಭಿಸಲಾಗುವುದು ಎಂದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next