ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಅದರ “ಇಳುವರಿ’ಯನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಡೆದುಕೊಳ್ಳುವ ಉಮೇದಿನೊಂದಿಗೆ ಹೊರಟಿರುವ ಬಿಜೆಪಿಗೆ ಸವಾಲು ಎಂಬಂತೆ ಮುಂದಿನ ವರ್ಷ ಜ.8ರಂದು ಕೋಟೆನಾಡು ಚಿತ್ರದುರ್ಗದಲ್ಲಿ ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳ್ಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ಡಾ. ಎಚ್.ಸಿ. ಮಹದೇಪ್ಪ ಸೇರಿದಂತೆ ಎಸ್ಸಿ-ಎಸ್ಟಿ ಸಮುದಾಯಗಳ 40ಕ್ಕೂ ಹೆಚ್ಚು ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯ ಮಟ್ಟದ ಬೃಹತ್ ಐಕ್ಯತಾ ಸಮಾವೇಶಕ್ಕೂ ಮೊದಲು ಜಾಗೃತಿ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನಿರ್ಧಾರ ಮಾಡಲಾಗಿದ್ದು, ಚಿತ್ರದುರ್ಗದಲ್ಲಿ ನಡೆಯುವ ಸಮಾವೇಶದಲ್ಲಿ 5ರಿಂದ 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರಮಟ್ಟದ ಪ್ರಮುಖ ನಾಯಕರು, ಬೇರೆ ರಾಜ್ಯಗಳ ಎಸ್ಸಿ-ಎಸ್ಟಿ ಸಮಯದಾಯಗಳ ಪ್ರಬಲ ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಐಕ್ಯತಾ ಸಮಾವೇಶಕ್ಕೆ ದಿನಾಂಕ ಮತ್ತು ಸ್ಥಳದ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮವರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶದಲ್ಲಿ ಇರುತ್ತಾರೆ. ಇದರ ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನೂ ಸಮಾವೇಶಕ್ಕೆ ಆಹ್ವಾನಿಸುವ ಬಗ್ಗೆ ಚರ್ಚಿಸಲಾಗಿದೆ.
– ಆರ್. ಧರ್ಮಸೇನಾ, ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷ