ನವದೆಹಲಿ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ತನಗೆ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತ ದತ್ತಾ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಶ್ರೀನಿವಾಸ್ ಬಿ.ವಿ. ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ. ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ.
ನನ್ನ ಮೌಲ್ಯಗಳು ಮತ್ತು ಶಿಕ್ಷಣವು ಇದಕ್ಕೆಲ್ಲ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಈಗಾಗಲೇ ಪ್ರಿಯಾಂಕ ವಾದ್ರಾ, ರಾಹುಲ್ ಗಾಂಧಿ ಅವರ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕಾರಣಕ್ಕಾಗಿ ಬಹಿರಂಗವಾಗಿ ಈ ವಿಷಯ ಪ್ರಸ್ತಾಪಿಸಲಾಗುತ್ತಿದೆ. ಕಾಂಗ್ರೆಸ್ ನಾಯಕತ್ವ ಕಿವುಡಾಗಿದೆ,’ ಎಂದು ದೂರಿದ್ದಾರೆ.
ಈ ಬಗ್ಗೆ ಪ್ರಕ್ರಿಯೆ ನೀಡಿದ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ರಾಹುಲ್, ಪ್ರಿಯಾಂಕಾಗೆ ದೂರಿತ್ತರೂ, ಕ್ರಮ ಕೈಗೊಳ್ಳಲಾಗಿಲ್ಲ ಎಂದು ಟೀಕಿಸಿದ್ದಾರೆ.