ನವದೆಹಲಿ: ಇತ್ತೀಚೆಗೆ ಬಹಿರಂಗಗೊಂಡ ಉತ್ತರಪ್ರದೇಶ, ಉತ್ತರಾಖಂಡ್ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿರುವುದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಭಯ ಹುಟ್ಟಿಸಿರುವಂತಿದೆ! ಅದಕ್ಕೆ ಕಾರಣ, ದಿಲ್ಲಿ ಮಹಾನಗರ ಪಾಲಿಕೆ(ಎಂಸಿಡಿ) ಚುನಾವಣೆಯಲ್ಲಿ ಇವಿಎಂ(ವಿದ್ಯುನ್ಮಾನ ಮತಯಂತ್ರ) ಬದಲು, ಬ್ಯಾಲೆಟ್ ಪೇಪರ್ ಉಪಯೋಗಿಸುವಂತೆ ಚುನಾವಣಾ ಆಯೋಗಕ್ಕೆ ಕೇಜ್ರಿ ಪತ್ರ ಬರೆದು ವಿನಂತಿಸಿಕೊಂಡಿದರುವುದು.
ವರದಿಯ ಪ್ರಕಾರ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಎಂಸಿಡಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದೆ.
ಚುನಾವಣಾ ಆಯೋಗಕ್ಕೆ ಪತ್ರ ಬರೆದು ಈ ರೀತಿ ಮನವಿ ಮಾಡಿಕೊಳ್ಳುವಂತೆ ಕೇಜ್ರಿವಾಲ್ ಅವರು ಮುಖ್ಯಕಾರ್ಯದರ್ಶಿ ಎಂಎಂ ಕುಟ್ಟಿಗೆ ನಿರ್ದೇಶನ ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಸಲಿ ಎಂದು ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಮನವಿ ಮಾಡಿಕೊಳ್ಳಲಾಗಿದೆ ಎಂದು ಆಪ್ ಮೂಲಗಳು ತಿಳಿಸಿವೆ.
ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಮೂರು ಮಹಾನಗರ ಪಾಲಿಕೆ ಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆರೋಗ ಘೋಷಿಸುವ ಸಾಧ್ಯತೆ ಇದೆ. ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಗಳಿಸಿದ ನಂತರ ಬಿಎಸ್ಪಿ ವರಿಷ್ಠೆ ಮಾಯಾವತಿ, ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದರು. ವಿದ್ಯುನ್ಮಾನ ಮತಯಂತ್ರ ಬಳಸಿದ್ದರಿಂದಲೇ ಬಿಜೆಪಿಗೆ ಗೆಲುವು ಸಾಧ್ಯವಾಯ್ತು ಎಂದು ಆರೋಪಿಸಿದ್ದರು.