Advertisement

ಗ್ರಾಪಂಗಳಲ್ಲೂ ಘನತ್ಯಾಜ್ಯ ನಿರ್ವಹಣೆಗೆ ಕಾರ್ಯಯೋಜನೆ 

06:00 AM Oct 30, 2018 | |

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಸಮರ್ಪಕ ಘನ ತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಪ್ರತಿ ತಾಲೂಕಿನಲ್ಲಿ ಕನಿಷ್ಠ 5 ರಿಂದ 6 ಗ್ರಾಮ ಪಂಚಾಯಿತಿಗಳಲ್ಲಿ ಘಟಕ ನಿರ್ಮಾಣಕ್ಕೆ ತೀರ್ಮಾನಿಸಿದೆ. ನವೆಂಬರ್‌ ಅಂತ್ಯದೊಳಗೆ ಈ ಸಂಬಂಧ ಯೋಜನಾ ರೂಪುರೇಷೆ ಸಿದ್ಧಪಡಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಹುಮಹಡಿ ಕಟ್ಟಡದಲ್ಲಿ ಸೋಮವಾರ ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣ ಭಾಗದಲ್ಲೂ ತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯ. ಆ ನಿಟ್ಟಿನಲ್ಲಿ ತಕ್ಷಣದಿಂದಲೇ ಕಾರ್ಯೋನ್ಮುಖವಾಗಬೇಕಿದೆ ಎಂದು ಹೇಳಿದರು. 

Advertisement

ಹಂತ ಹಂತವಾಗಿ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಯೋಜನೆ ರೂಪಿಸಿ ಅಗತ್ಯ ಬಿದ್ದರೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳು, ಸಮುದಾಯದ ಮುಖ್ಯಸ್ಥರ ಸಹಭಾಗಿತ್ವ ಹಾಗೂ ನೆರವು ಪಡೆದುಕೊಳ್ಳಿ ಎಂದು ತಿಳಿಸಿದರು.ನ.1ರಂದು ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸುವ ನಿಟ್ಟಿನಲ್ಲಿ ಹಲವು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಶ್ರಮವಹಿಸಿ ಗುರಿ ತಲುಪಿಸಿದ್ದಾರೆ. ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಇನ್ನೂ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.  ಹೀಗಾಗಿ, ಬೇಡಿಕೆ ಇರುವ ಜಿಲ್ಲೆಗಳಲ್ಲಿ ಶೌಚಾಲಯ 
ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಿ ಎಂದು ಸೂಚಿಸಿದರು.

ನರೇಗಾ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸದ ಜಿಪಂ ಸಿಇಒಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು. ನಿಗದಿತ ಗುರಿಯನ್ವಯ ನರೇಗಾ ಯೋಜನೆಯ ಪ್ರಗತಿ ತೋರಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ
ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನರೇಗಾ ಯೋಜನೆಯಡಿ ತೋಟಗಾರಿಕೆ ಹಾಗೂ ರೇಷ್ಮೆ ಬೆಳೆ ಬೆಳೆಯಲು ಹೆಚ್ಚಿನ ಒತ್ತು ಕೊಡಬೇಕು. ಜತೆಗೆ ಪಶುಪಾಲನಾ ಶೆಡ್‌ಗಳನ್ನು ನಿರ್ಮಿಸಲು ಗಮನ ಕೊಡಬೇಕು. ಮುಖ್ಯವಾಗಿ ಎಲ್ಲ ಸರ್ಕಾರಿ ಕಚೇರಿಗಳ ಆವರಣದಲ್ಲಿ ಗಡಿಗಳನ್ನು ನೆಡಲು ಗಮನಹರಿಸಬೇಕು. ಇದಕ್ಕಾಗಿ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌. ಕೆ.ಅತೀಕ್‌, ಆಯುಕ್ತರಾದ ಡಾ. ಆರ್‌. ವಿಶಾಲ್‌ ಹಾಗೂ ಕನಕವಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next