ಬಳ್ಳಾರಿ: ಪ್ರಸಕ್ತ 2019-2020ನೇ ಸಾಲಿನಲ್ಲಿ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಕಡಿತಗೊಳಿಸಲು ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ವಿವಿಧ ಶಾಲಾ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾನಿರತರು, ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲಹೊತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ತಲುಪಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು
2019-20ನೇ ಸಾಲಿನ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಹೊರಡಿಸಿದೆ. ಈ ಹಿಂದೆ 2ರಿಂದ 10ನೇ ತರಗತಿಯವರೆಗೂ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿ ವೇತನ ದೊರೆಯುತ್ತಿತ್ತು. ಆದರೆ, ಈ ನೂತನ ಆದೇಶದಂತೆ ಅನುದಾನ ಕೊರತೆ ನೆಪವೊಡ್ಡಿ, ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳನ್ನು ವಂಚಿಸುವಂತಿದೆ.
ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಅದರಲ್ಲೂ ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಬೇಕೆಂದು ತೀರ್ಮಾನಿಸಿದೆ. ಇದು ಅತ್ಯಂತ ಅಪ್ರಜಾತಾಂತ್ರಿಕ ನಿಲುವು ಎಂದು ಎಐಡಿಎಸ್‌ಒ ಪರಿಗಣಿಸಿದ್ದು, ಅನುದಾನದ ಕೊರತೆ ಇದ್ದರೆ ಅದನ್ನು ಹೆಚ್ಚಿಸಬೇಕೆ ಹೊರತು ವಿದ್ಯಾರ್ಥಿಗಳ ವೇತನ ತಡೆಹಿಡಿಯುವುದು ತರವಲ್ಲ. ಅಲ್ಲದೇ ಪ್ರಸಕ್ತ ಕಾಲದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೇಲೆಯೇ ಅವಲಂಬಿತರಾಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಈರಣ್ಣ, ಎಂ.ಶಾಂತಾ, ಜೆ.ರಂಗಸ್ವಾಮಿ, ಮಣಿಕಂಠ, ಶಿವ ಸೇರಿದಂತೆ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.