ಬೆಂಗಳೂರು: ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ನನಗಾಗಲಿ, ಸರ್ಕಾರಕ್ಕಾಗಲಿ ಪ್ರತಿಷ್ಠೆ ಇಲ್ಲ. ಮಕ್ಕಳ ಭವಿಷ್ಯವನ್ನು ಗಮನದಲ್ಲಿರಿಸಿ, ತಾಂತ್ರಿಕ ಸಲಹಾ ಸಮಿತಿ ಸಲಹೆಯ ಮೇರೆಗೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ನನ್ನ ನಡುವೆ ಸಮನ್ವಯದ ಕೊರತೆ ಇಲ್ಲ. ಅವರು ನೀಡಿದ ತಾಂತ್ರಿಕ ಸಲಹಾ ಸಮಿತಿ ಸಲಹೆಯನ್ನು ಪರಿಗಣಿಸಿಯೇ ನಾವು ನಿರ್ಧಾರ ಕೈಗೊಂಡಿದ್ದೇವೆ ಎಂದರು.
ಇದನ್ನೂ ಓದಿ:ಸುರೇಶ್ ಕುಮಾರ್ ಹೇಳಿದ್ದು ಯಾವುದಾದಾರೂ ಆಗಿದೆಯಾ? ವಿಶ್ವನಾಥ್ ವಾಗ್ದಾಳಿ
ಬೆಂಗಳೂರು ಕೇಂದ್ರಿತವಾಗಿ ಗಮನಿಸದೆ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯವೂ ಮುಖ್ಯ. ಬಾಲ ಕಾರ್ಮಿಕ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿದೆ. ಆ ಹಿನ್ನೆಲೆಯಲ್ಲಿ ಚರ್ಚಿಸಿ ಕೆಲ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವನಾಥ್ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದವರು. ಅವರ ಅಭಿಪ್ರಾಯಗಳಿಗೆ ಗೌರವವಿದೆ. ಈ ಬಗ್ಗೆ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸುತ್ತೇವೆ ಎಂದರು.