ಬೆಂಗಳೂರು : ರಾಜ್ಯದಲ್ಲಿ ಶಾಲೆ ಮತ್ತು ಪದವಿ ಪೂರ್ವ ತರಗತಿಗಳು ಆರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಚರ್ಚೆ ನಡೆಸಲಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಶಾಲಾರಂಭದ ಕುರಿತು ಚರ್ಚೆ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಆಯುಕ್ತ ಅನುಬ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ. ಸರ್ಕಾರ ಶಾಲಾರಂಭದ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಈಗಾಗಲೇ ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಶೇ.15ರಷ್ಟು ದಾಟಿಲ್ಲ. ಕೊರೊನಾ ಆಂತಕ ಹಾಗೂ ಇತರೆ ಕಾರಣಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿಲ್ಲ. ಆನ್‌ಲೈನ್ ಹಾಗೂ ಆಫ್ಲೈನ್( ಪೂರ್ವ ಮುದ್ರಿತ ವಿಡಿಯೋ ತರಗತಿ) ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಮಧ್ಯೆ ಕೊರೊನಾ ಎರಡನೇ ಅಲೆಯ ಆತಂಕವೂ ಕೇಳಿ ಬರುತ್ತಿದೆ. ಹೀಗಾಗಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.
ಇದನ್ನೂ ಓದಿ :KSRP ಹುದ್ದೆಗೆ ಅಭ್ಯರ್ಥಿ ಪರ ನಕಲಿ ಹೆಸರಲ್ಲಿ ಪರೀಕ್ಷೆ ಬರೆದು ಸಿಕ್ಕಿಬಿದ್ದ ಪೊಲೀಸ್ ಪೇದೆ!
ಶಾಲಾರಂಭದ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈಗಾಗಲೇ ವಿವಿಧ ವಲಯದ ಶಿಕ್ಷಣ ಪಾಲುದಾರರು, ಶಿಕ್ಷಣ ತಜ್ಞರು, ಖಾಸಗಿ ಆಡಳಿತ ಮಂಡಳಿಯ ಸದಸ್ಯರು, ಆರ್‌ಟಿಇ ಪೋಷಕರ ಸಂಘದ ಪ್ರತಿನಿಧಿಗಳು ಸೇರಿದಂತೆ ಎಲ್ಲರ ಅಭಿಪ್ರಾಯ ಪಡೆದು, ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ ಹಾಗೂ ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಬಹುತೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಸರ್ಕಾರಕ್ಕೆ ವರದಿಯೂ ಸಲ್ಲಿಕೆಯಾಗಿದೆ.
ಈ ಮಧ್ಯೆ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೇಡಿಕೆಯನ್ನು ಈಡೇರಿಸಿಯೇ ಶಾಲಾರಂಭದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮೇಲೆ ಒತ್ತಡ ಹೇರುವ ಪ್ರಯತ್ನವೂ ಮಾಡುತ್ತಿವೆ.