Advertisement

2 ಜೊತೆ ಶಾಲಾ ಸಮವಸ್ತ್ರ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

12:38 AM Aug 09, 2019 | Sriram |

ಬೆಂಗಳೂರು: ಪ್ರಸಕ್ತ 2019-20ನೇ ಶೈಕ್ಷಣಿಕ ವರ್ಷದಲ್ಲಿ ಆರ್‌ಟಿಇ ಕಾಯ್ದೆ ವ್ಯಾಪ್ತಿಗೊಳಪಡುವ ಶಾಲಾ ಮಕ್ಕಳಿಗೆ ಎರಡು ಜೊತೆ ಹೊಲಿದ ಸಮವಸ್ತ್ರಗಳನ್ನು ಪೂರೈಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಗುರುವಾರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಕೊಪ್ಪಳ ಜಿಲ್ಲೆ ಕಿನ್ನಾಳ ಗ್ರಾಮದ ದೇವಪ್ಪ ಬಸಪ್ಪ ಹರಿಜನ ಎಂಬುವರ 8 ವರ್ಷ ಪುತ್ರ ಮಾಸ್ಟರ್‌ ಮಂಜುನಾಥ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಇದೇ ವೇಳೆ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾದ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿ ಇತರರಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಆ.26ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2019-20ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದ ಮಕ್ಕಳು ಸೇರಿ ಆರ್‌ಟಿಇಯಡಿ ಪ್ರವೇಶ ಪಡೆದುಕೊಂಡ ಮಕ್ಕಳಿಗೆ ಒಂದು ಜೊತೆ ಸಿದ್ಧಪಡಿಸಿದ ಸಮವಸ್ತ್ರ ಮಾತ್ರ ವಿತರಿಸಲಾಗಿದೆ. ಎರಡನೇ ಜೊತೆ ಸಿದ್ಧಪಡಿಸಿದ ಸಮವಸ್ತ್ರ ಈವರೆಗೆ ವಿತರಿಸಲಾಗಿಲ್ಲ. ಇದರಿಂದ ಬಡ ಮಕ್ಕಳು ಹಾಗೂ ಅವರ ಪೋಷಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ಅನೇಕ ಶಾಲೆಗಳಲ್ಲಿ ಇನ್ನೂ ಒಂದು ಜತೆ ಸಿದ್ಧಪಡಿಸಿದ ಸಮವಸ್ತ್ರ ಸಹ ವಿತರಿಸಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿದರು.

ಈ ವೇಳೆ, ಸರ್ವ ಶಿಕ್ಷಣ ಅಭಿಯಾನದಡಿ ಕೇಂದ್ರದ ನೆರವು ಪಡೆದು 2ನೇ ಜೊತೆ ಸಮವಸ್ತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಕೇಂದ್ರದ ಅನುದಾನ ಬಂದಿಲ್ಲ, ಹಾಗಾಗಿ 2ನೇ ಸೆಟ್ ಸಮವಸ್ತ್ರ ನೀಡಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next