ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದಿಲ್ಲಿ ಹೈಕೋರ್ಟ್ ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿ
ವಿಚಾರಣಾ ನ್ಯಾಯಾಲಯದ ಕಲಾಪಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನ ನಾಲ್ಕು ವಾರಗಳವರೆಗೆ ವಿಸ್ತರಿಸಿದೆ
ಪ್ರಧಾನಿ ಮೋದಿ ಅವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿ ತರೂರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕೇಸು ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ತರೂರ್ ದಾವೆ ಹೂಡಿದ್ದರು.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ. ಎನ್ ಭಟ್ಟಿ ಅವರನ್ನೊಳಗೊಂಡ ಪೀಠ, ತರೂರ್ ಅವರ ಮನವಿಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ ಪೊಲೀಸರು ಮತ್ತು ದೂರುದಾರರಿಗೆ ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ. ಮಾನನಷ್ಟ ಮೊಕದ್ದಮೆಗಳ ಮೇಲಿನ ತಡೆ ಮಧ್ಯಂತರ ಆದೇಶ ಮುಂದುವರೆಯಲು” ಪೀಠವು ನಿರ್ದೇಶಿಸಿದೆ.
ಸೆಪ್ಟೆಂಬರ್ 10 ರಂದು ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರು ತರೂರ್ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.