ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದವರಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಆ.19ರಿಂದ ಸೆ.3ರವರೆಗೆ ವಾರ್ಷಿಕ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತಂತೆ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಪ್ರಕಟಿಸಲಾಗಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 90 ಪದವಿ ಪೂರ್ವ ಕಾಲೇಜು ಒಳಗೊಂಡಂತೆ 496 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಮೂರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ಆರೋಗ್ಯ ಸಲಕರಣೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳಂತೆ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಸಮೂಹ ಮಾಧ್ಯಮಗಳಲ್ಲಿ / ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧ. ಒಂದು ವೇಳೆ ಇಂತಹ ಘಟನೆಗಳು ಕಂಡುಬಂದಲ್ಲಿ ಇಲಾಖೆ ಕ್ರಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿದರು ಮತ್ತು ಸುತ್ತಲಿನ ಝರಾಕ್ಸ್, ಕಂಪ್ಯೂಟರ್ ಮಳಿಗೆ ಮುಚ್ಚುವಂತೆ ಆದೇಶಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಪೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಕೇಂದ್ರದ ಮುಖ್ಯ ಅಧೀಕ್ಷಕರು “ಬೇಸಿಕ್ ಸೆಟ್’ ಫೋನ್ ಮಾತ್ರ ಬಳಸಬಹುದು. ಆದರೆ ಸ್ಮಾಟ್ ìಫೋನ್ ತರುವುದು ನಿಷೇಧಿಸಿದೆ. ಪರೀಕ್ಷಾ ಗೌಪ್ಯ ಕಾರ್ಯಗಳಿಗೆ ಬಳಸಲಾಗುವ ವಾಹನಗಳಿಗೆ ಪರೀಕ್ಷೆ ಮುಂಚಿತವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ಮತ್ತು ಪರೀಕ್ಷೆ ನಂತರ ಹೊರಬರುವಾಗ ಗುಂಪುಗೂಡದಂತೆ ಜಾಗೃತಿ ವಹಿಸಬೇಕು. ಪರೀಕ್ಷಾ ಸಿಬ್ಬಂದಿ ಸೇರಿದಂತೆ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಸೇರಿದಂತೆ ಕಾಲೇಜು ಉಪನ್ಯಾಸಕರು, ಜಿಲ್ಲೆಯ ಶಿಕ್ಷಣಾಧಿಕಾರಿಗಳು, ತಹಶೀಲ್ದಾರರು, ಪೊಲೀಸ್ ಸಿಬ್ಬಂದಿ ಇದ್ದರು.
ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋ ಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು. ಕೇಂದ್ರಗಳಲ್ಲಿ ವಾಟರ್ ಬಾಯ್‌ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿವ ನೀರಿನ ವ್ಯವಸ್ಥೆ ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು.
*ಡಾ| ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ