ಬೆಂಗಳೂರು: ನಗರದ ವ್ಯಾಪ್ತಿಗೆ ಬರುವ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಕಾರ್ಯತಂತ್ರ ಹೆಣೆದಿದ್ದು, ನಾಲ್ಕೂ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಬೆಂಗಳೂರು ಉಸ್ತುವಾರಿ ಕಾರ್ಯದರ್ಶಿ ಯಶೋಮತಿ ಠಾಕೂರ್ ಶುಕ್ರವಾರ ಜಿಲ್ಲಾ ಮುಖಂಡರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಪ್ರಮುಖವಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಮೃದು ಹಿಂದುತ್ವ ಅನುಸರಿಸಲು ಕೆಲವು ಮುಖಂಡರು ಸಭೆ ಯಲ್ಲಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ಬಾರಿಯೂ ಅಲ್ಪ ಸಂಖ್ಯಾತ ಸಮುದಾಯದವರಿಗೆ ಟಿಕೆಟ್ ನೀಡುವುದರಿಂದ ಬಿಜೆಪಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿ ಚುನಾವಣೆಯನ್ನು ಗೆಲ್ಲುತ್ತಿದೆ. ಹೀಗಾಗಿ, ನಾವು ಸ್ವಲ್ಪ ಸಾಫ್ಟ್ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಹಾಲಿ ಸಂಸದ ಪಿ.ಸಿ.ಮೋಹನ್ ಕ್ಷೇತ್ರದಲ್ಲಿ ಅಷ್ಟೊಂದು ಪ್ರಭಾವಿಯಾಗಿಲ್ಲ. ಕ್ಷೇತ್ರದ 22 ಲಕ್ಷ ಮತದಾರರಲ್ಲಿ 5 ಲಕ್ಷ ಅಲ್ಪಸಂಖ್ಯಾತ ಸಮುದಾಯ ದವರಿದ್ದು, ಇತರೆ ಸಮುದಾಯದವರು ಹದಿನೈದು ಲಕ್ಷಕ್ಕೂ ಹೆಚ್ಚು ಇದ್ದಾರೆ. ಹೀಗಾಗಿ, ಬಿಜೆಪಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹಿಂದೂ ಅಸ್ತ್ರ ಪ್ರಯೋಗ ಮಾಡುತ್ತಿರುವುದರಿಂದ ಕಾಂಗ್ರೆಸ್‌ನಿಂದಲೂ ಹಿಂದೂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಸರಳವಾಗಿ ಗೆಲುವು ಸಾಧಿಸಬಹುದು ಎಂದು ಜಿಲ್ಲಾ ಮುಖಂಡರು ಅಭಿಪ್ರಾಯವಾಗಿದೆ ಎನ್ನಲಾಗಿದೆ.
ಆಕಾಂಕ್ಷಿಗಳು: ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಎಂಟು ಜನ ಟಿಕೆಟ್ ಆಕಾಂಕ್ಷಿಗಳಿದ್ದು ಮಾಜಿ ಸಚಿವ ರೋಷನ್ ಬೇಗ್, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್, ಮಾಜಿ ಸಂಸದ ಸಾಂಗ್ಲಿಯಾನ, ಮಾಜಿ ಸಚಿವ ಜೆ. ಅಲೆಗ್ಸಾಂಡರ್, ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮದ್, ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್, ಎಸ್.ಎಸ್. ಪ್ರಕಾಶಂ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರೂ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಬಯಸಿದ್ದಾರೆ.
ಬೆಂಗಳೂರು ಉತ್ತರಕ್ಕೆ ಮಾಜಿ ಸಂಸದ ಸಿ.ನಾರಾ ಯಣಸ್ವಾಮಿ, ರಾಜ್ಯಸಭಾ ಸದಸ್ಯ ಪ್ರೊ. ರಾಜೀವ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ. ನಾರಾಯಣಸ್ವಾಮಿ, ಎಚ್.ಎಂ. ರೇವಣ್ಣ, ಚಿಕ್ಕಬಳ್ಳಾ ಪುರ ಶಾಸಕ ಡಾ. ಸುಧಾಕರ್, ಜಿಲ್ಲಾಧ್ಯಕ್ಷ ರಾಜ್‌ಕುಮಾರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಪಕ್ಷ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಯಶೋಮತಿ ಠಾಕೂರ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಕಡಿಮೆ ಇದ್ದು, ಮಾಜಿ ಶಾಸಕ ಪ್ರಿಯಾ ಕೃಷ್ಣ ಹಾಗೂ ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದು, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುವ ಸಂಪೂರ್ಣ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಮತ್ತೂಂದೆಡೆ ಕೆಲವು ಮುಖಂಡರು ರಾಮಲಿಂಗಾರೆಡ್ಡಿ ಅಥವಾ ಎಂ.ಕೃಷ್ಣಪ್ಪ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸುವುದು ಸೂಕ್ತ ಎಂಬ ಸಲಹೆ ನೀಡಿದರು ಎನ್ನಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಪಕ್ಷದ ಮುಖಂಡರು ಹಾಲಿ ಸಂಸದ ಡಿ.ಕೆ. ಸುರೇಶ್ ಅವರ ಹೆಸರನ್ನು ಒಮ್ಮತದಿಂದ ಸೂಚಿಸಿದ್ದಾರೆ ಎನ್ನಲಾಗಿದೆ.