Advertisement

8ರಂದು ಸಪ್ತಪದಿ ಜಾಗೃತಿಗೆ ವಿಚಾರ ಸಂಕಿರಣ

02:19 PM Mar 06, 2020 | Suhan S |

ಬೆಳಗಾವಿ: ಜಿಲ್ಲೆಯಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ನಡೆಯಲಿರುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಲು ಮಾ. 8ರಂದು ಸವದತ್ತಿಯ ಮಾಮನಿ ಕಲ್ಯಾಣ ಮಂಟಪದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತ ವಿಚಾರ ಸಂಕಿರಣದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಸಪ್ತಪದಿ ಸಾಮೂಹಿಕ ಕಾರ್ಯಕ್ರಮದ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತಿರುವ ವಿಚಾರ ಸಂಕಿರಣವನ್ನು ಅರ್ಥಪೂರ್ಣ ಮತ್ತು ಅಚ್ಚುಕಟ್ಟಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬಹಳ ಮುತುವರ್ಜಿ ವಹಿಸಿ ಈ ಯೋಜನೆಯನ್ನು ರೂಪಿಸಿದ್ದು, ಅವರ ಆಶಯದಂತೆ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಿದೆ ಎಂದರು. ಏ. 26ರಂದು ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಹಾಗೂ ಮೇ 24ರಂದು ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನದಲ್ಲಿ ಸಪ್ತಪದಿ ಕಾರ್ಯಕ್ರಮದಡಿ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ ಎಂದರು.

ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಸೇರಿದಂತೆ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಪರಿಷತ್‌ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಹುಕ್ಕೇರಿ-ಬೆಳಗಾವಿಯ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ವಿಶ್ವನಾಥ(ಆನಂದ) ಮಾಮನಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಪ್ತಪದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವುದರಿಂದ ಇದರ ಯಶಸ್ಸಿಗಾಗಿ ಎಲ್ಲರೂ ಶ್ರಮಿಸಬೇಕು. ಮುಂಬರುವ ದಿನಗಳಲ್ಲಿ ಜನಜಾಗೃತಿ ಮೂಡಿಸಲು ಅನುಕೂಲವಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಸಹಾಯಕಿಯರು ವಿಚಾರಸಂಕಿರಣದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ ತಿಳಿಸಿದರು.

Advertisement

ಮುಜರಾಯಿ ಇಲಾಖೆ ಸಚಿವರ ವಿಶೇಷಾಧಿಕಾರಿ ವಿವೇಕ ಅಮೀನ, ಜಿಪಂ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ, ಸವದತ್ತಿ ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಸೇರಿದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next