ಬೀದರ : ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಪಿಜಿಆರ್ ಸಿಂಧ್ಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ಬಾರಿ ಬಸವಕಲ್ಯಾಣ ಕ್ಷೇತ್ರದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಈಗ ಇದೇ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಮತ್ತು ಸಿಂಧ್ಯಾ ಅವರು ಜನತಾದಳದಲ್ಲಿ ಒಟ್ಟಾಗಿ ಇದ್ದವರು. ನನ್ನ ಜೊತೆಯೇ ಅವರು ಸಹ ಕಾಂಗ್ರೆಸ್ ಗೆ ಸೇರಬೇಕಾಗಿತ್ತು. ಆದರೆ, ತಡವಾಗಿ ಬಂದಿದ್ದಾರೆ. ಅವರ ಆಗಮನದಿಂದ ಕಾಂಗ್ರೆಸ್ ಗೆ ಹೆಚ್ಚು ಬಲ ಬಂದಂತಾಗಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮಾತನಾಡಿ, ಹಿರಿಯ ರಾಜಕಾರಣಿ ಸಿಂಧ್ಯಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರ ಶಕ್ತಿಯನ್ನು ನಾವು ಪಕ್ಷದ ಬಲವರ್ಧನೆಗಾಗಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಮುರಮ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ, ಶಾಸಕರಾದ ರಾಜಶೇಖರ ಪಾಟೀಲ, ರಹೀಮ್ ಖಾನ್ ಇನ್ನಿತರರು ಇದ್ದರು.