ಮುಂಬಯಿ: ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಗಳಲ್ಲಿ ಧನಾತ್ಮಕತೆ ತೋರಿಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 350 ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,900 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು.
39,970.48 ಅಂಕಗಳ ದಾಖಲೆ ಎತ್ತರದ ಮಟ್ಟವನ್ನು ತಲುಪಿದ ಬಳಿಕ ಸೆನ್ಸೆಕ್ಸ್ ಬೆಳಗ್ಗೆ 10.45ರ ಸುಮಾರಿಗೆ 258.18 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 39,874.08 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.30 ಅಂಕಗಳ ಮುನ್ನಡೆಯೊಂದಿಗೆ 11,944.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಟಾಪ್ ಗೇನರ್‌ಗಳಾಗಿ ಮೂಡಿ ಬಂದ ಪವರ್ ಗ್ರಿಡ್, ಟಾಟಾ ಸ್ಟೀಲ್, ಟಿಸಿಎಸ್, ಎಸ್ ಬ್ಯಾಂಕ್, ಲಾರ್ಸನ್, ಇನ್‌ಫೋಸಿಸ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಶೇರುಗಳು ಶೇ.2ರ ಏರಿಕೆಯನ್ನು ಕಂಡವು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 8 ಪೈಸೆಗಳ ಏರಿಕೆಯನ್ನು ಕಂಡು 69.43 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬ್ರೆಂಟ್ ಕಚ್ಚಾ ತೈಲ ಇಂದು ಶೇ.0.52ರ ಇಳಿಕೆಯನ್ನು ಕಂಡು ಬ್ಯಾರಲ್ ಗೆ 63.62 ಡಾಲರ್ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.