ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ಜೈಲಿನಲ್ಲಿರುವ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಿದ ಗಂಟೆಗಳ ನಂತರ, ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರು ಕೇಂದ್ರ ಗೃಹ ಸಚಿವಾಲಯದ ಸಲಹೆಯ ಮೇರೆಗೆ ತಮ್ಮ ಆದೇಶವನ್ನು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ ಗವರ್ನರ್ ಆರ್.ಎನ್ ರವಿ ಅವರು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದು, ಆದೇಶ ತಡೆ ಹಿಡಿದ ಬಗ್ಗೆ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಅಟಾರ್ನಿ ಜನರಲ್ ಅವರಿಂದ ಕಾನೂನು ಸಲಹೆ ಪಡೆದು ನಿರ್ಧಾರ ಮಾಡುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಪಾಲರಿಗೆ ತಿಳಿಸಿದೆ.
ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಆದೇಶವನ್ನು ಮುಂದಿನ ಸಂವಹನದವರೆಗೆ ರಾಜ್ಯಪಾಲರು ಹಿಂಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಆಗಿದ್ದೇನು?: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ಆದೇಶ ಹೊರಡಿಸಿದ್ದರು.
“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.