ಮಹದೇವಪುರ: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿದು ಎಂಟು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಇಲ್ಲಿನ ಆಕ್ಸೆಂಚರ್ ಸಾಫ್ಟ್ವೆರ್ ಕಂಪನಿಯ ಆವರಣದಲ್ಲಿ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳೆಲ್ಲಾ ಒಡಿಶಾ ಮೂಲದವರಾಗಿದ್ದು, 3 ಅಂತಸ್ತಿನ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ದಿವ್ಯಶ್ರೀ ಕನ್ಸ್‌ಸ್ಟ್ರಕ್ಷನ್ ಎಂಬ ಕಂಪನಿ ಪಡೆದಿತ್ತು. ಕೆಲಸವನ್ನು ಬೇಗ ಮುಗಿಸುವ ಉದ್ದೇಶದಿಂದ ಹಗಲು ಇರುಳು ಎನ್ನದೇ ನಿತ್ಯ 30ರಿಂದ 40ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗಿನ ಜಾವ 5.30ರ ವೇಳೆಗೆ 2ನೇ ಅಂತಸ್ತಿನ ಸೆಂಟ್ರಿಂಗ್ ಕುಸಿದು ಬಿದ್ದಿದೆ.
ಪರಿಣಾಮ ಈ ವೇಳೆ ಕೆಲಸ ಮಾಡುತ್ತಿದ್ದ 8 ಮಂದಿ ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈಟ್‌ಫೀಲ್ಡ್ ವಲಯದ ಡಿಸಿಪಿ ನಾರಾಯಣ್ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿತು. ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಾಚಲಪತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಮತ್ತು ಗಾಯಾಳುಗಳ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಘಟನೆ ಖಂಡಿಸಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಂಘ- ಸಂಸ್ಥೆಗಳು ಪ್ರತಿಭಟನೆ ನಡೆಸಿದವು. ಗುತ್ತಿಗೆದಾರರ ಮತ್ತು ಕಂಪನಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಿಯಮಗಳನ್ನು ಗಾಳಿಗೆ ತೂರಿ ಹಗಲು ರಾತ್ರಿ ಎನ್ನದೇ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ.
ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ದೊಡ್ಡನೆಕ್ಕುಂದಿ ಪಾಲಿಕೆ ಸದಸ್ಯೆ ಶ್ವೇತ ವಿಜಯ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಇವರ ಹೋರಾಟಕ್ಕೆ ಕರ್ನಾಟಕ ರಿಪಬ್ಲಿಕನ್ ಸೇನೆಯ ಕಾರ್ಯಕರ್ತರು ಸಾಥ್ ನೀಡಿದರು. 2 ತಿಂಗಳ ಹಿಂದೆಯಷ್ಟೇ ಬೆಳ್ಳಂದೂರು ಸಮೀಪ ನಿರ್ಮಾಣ ಹಂತದ ಕಟ್ಟಡ ಕುಸಿದ ಐವರು ಮೃತಟಪಟ್ಟಿದ್ದ ಪ್ರಕರಣವನ್ನು ಇಲ್ಲಿ ಸ್ಮರಿಸಬಹುದಾಗಿದೆ.