ಬೆಂಗಳೂರು: ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಆಯೋಗ ರಚಿಸಲು ನಿರ್ಧ ರಿಸಿರುವ ಸರಕಾರವು ಈ ಸಂಬಂಧ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ.
ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗಾಗಿ ಪ್ರತ್ಯೇಕ ಆಯೋಗದ ಆವಶ್ಯಕತೆ ಇದೆ. ಆದ್ದರಿಂದ ಈ ಸಂಬಂಧ ಕಾನೂನು ಸಲಹೆ ಪಡೆದು, ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳು, ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿ ರಾಜ್ಯ ಮುಖಂಡರ ನಿಯೋಗ ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದರು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಪರಿಶೀಲಿ ಸಲಾಗುವುದು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು ಎಂದರು.
ಇದಕ್ಕೆ ಮುನ್ನ ಮಾತನಾಡಿದ ಸಮಿತಿಯ ಮುಖಂಡರು, ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು 120 ಜಾತಿಗಳಿವೆ. ಈ ಪೈಕಿ ಎಸ್‌ಸಿ 51, ಎಸ್‌ಟಿ 23 ಹಾಗೂ ಹಿಂದುಳಿದ ವರ್ಗದ 46 ಜಾತಿಗಳಿವೆ. ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ, ಅಸ್ಮಿತೆ ಇಲ್ಲದ ಸಮುದಾಯಗಳಿಗೆ ಸರಕಾರದ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.
ಜೋಗಿ, ಪಿಚ್ಚಗುಂಟಲು ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವುಗಳನ್ನು ಸೂಕ್ತ ಜಾತಿಗೆ ಸೇರಿಸಿ ಮೀಸಲಾತಿ ಕಲ್ಪಿಸಬೇಕು, ಅಲೆಮಾರಿ ಸಮುದಾಯಗಳಿಗೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಸಮಿತಿಯ ಮುಖಂಡರು ಮನವಿ ಮಾಡಿದರು.