ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾರಾಜ ಹಾಗೂ ಯುವರಾಜ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ಮೂಲಸೌಲಭ್ಯ ಕಲ್ಪಿಸಿ: ಹಲವು ವರ್ಷಗಳ ಇತಿಹಾಸವಿರುವ ಯುವರಾಜ ಕಾಲೇಜಿನಲ್ಲಿ ಕುಡಿಯುವ ನೀರು, ಶೌಚಾಲಯ, ಲ್ಯಾಬ್ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳ ಕೊರತೆ ಎದುರಾಗಿದೆ ಎಂದು ಆರೋಪಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಅಂದಾಜು ಮೂರು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿ ಕಳೆದ ಒಂದೂವರೆ ವರ್ಷದಿಂದ ಈ ಸಮಸ್ಯೆ ಎದುರಾಗಿದ್ದು, ಇದನ್ನು ಬಗೆಹರಿಸುವಂತೆ ಮೈಸೂರು ವಿವಿ ಆಡಳಿತ ಮಂಡಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಪ್ರಮುಖವಾಗಿ ಕಾಲೇಜಿನಲ್ಲಿ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ, ವಿದ್ಯಾರ್ಥಿನಿಯರ ವಿಶ್ರಾಂತ ಕೊಠಡಿ,
ಪ್ರಯೋಗಾಲಯದಲ್ಲಿ ವಿದ್ಯುತ್ ಸಮಸ್ಯೆ, ಶುಚಿತ್ವ ಸೇರಿದಂತೆ ಕಾಲೇಜಿನಲ್ಲಿ ನಾನಾ ಸಮಸ್ಯೆಗಳಿವೆ. ಆದರೂ ವಿದ್ಯಾರ್ಥಿಗಳ ಬೇಡಿಕೆ ಈವರೆಗೂ ಈಡೇರಿಕೆಯಾಗಿಲ್ಲ ಎಂದು ಆರೋಪಿಸಿ ವಿವಿಧ ಘೋಷಣೆಗಳನ್ನು ಕೂಗಿದರು. ಈ ಸಂದಭìದಲ್ಲಿ ಸ್ಥಳಕ್ಕಾಗಮಿಸಿದ ಮೈಸೂರು ವಿವಿ ಕುಲಸಚಿವೆ ಡಿ.ಭಾರತಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಒಂದು ವಾರದೊಳಗೆ ಬಗೆಹರಿಸುವುದಾಗಿ ಭರವಸೆ ನೀಡುವ ಮೂಲಕ ವಿದ್ಯಾರ್ಥಿಗಳ ಮನವೊಲಿಸಿದರು.
ಲ್ಯಾಪ್‌ಟಾಪ್ ಕೊಡಿ: ರಾಜ್ಯ ಸರ್ಕಾರದಿಂದ ನೀಡುವ ಉಚಿತ ಲ್ಯಾಪ್‌ಟಾಪ್ ಸೌಲಭ್ಯವನ್ನು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೂ ನೀಡಬೇಕೆಂದು ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ನಗರದ ಕಾಡಾ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿವೈಒ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರ ಎಲ್ಲಾ ಪದವಿ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡುತ್ತಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಹಾರಾಜ ಕಾಲೇಜಿನ ಲ್ಯಾಪ್‌ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು. ಇದಕ್ಕೂ ಮುನ್ನ ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮತ್ತು ಸಂಸ್ಕೃತ ಪಾಠಶಾಲೆ ಮೂಲಕ ಕಾಡಾ ಕಚೇರಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.