Advertisement

ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ

01:13 AM Oct 03, 2019 | Team Udayavani |

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ನಿಗಮದ ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆಯೇ ಸೇವೆ ಎನ್ನುವ ಅಭಿಯಾನ ಹಮ್ಮಿಕೊಂಡಿತ್ತು. ಕೆಎಸ್‌ಆರ್‌ಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

Advertisement

ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು, ಕೇಂದ್ರ ಸರ್ಕಾರದ ಆದೇಶದಂತೆ “ಸ್ವಚ್ಛತೆಯೇ ಸೇವೆ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ನಿಗಮದ ನಿಲ್ದಾಣಗಳಲ್ಲಿ ಹಾಗೂ ಬಸ್‌ಗಳನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಸಂಬಂಧ ಸಾರ್ವಜನಿಕರು, ಪರಿಸರವಾದಿಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಲಾಗಿತ್ತು. ಇದರಲ್ಲಿ ಚರ್ಚೆಯಾದ ಕೆಲವು ಪ್ರಮುಖ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ನಿಗಮದ ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಿಗಮದ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಸಾರಿಗೆ ನಿಗಮದ ಸಿಬ್ಬಂದಿಗೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ಸ್ವಚ್ಛತಾ ಸಿಬ್ಬಂದಿಗೆ ಸಾರಿಗೆ ಸ್ವಚ್ಛತಾ ಹಾಗೂ ಸಾರಿಗೆ ಪರಿಸರ ಪ್ರಶಸ್ತಿ ನೀಡಲಾಗುವುದು ಹಾಗೂ ನಿಗಮದ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಮೂರು ತಿಂಗಳಿಗೊಮ್ಮೆ ಪರಿಸರ ಜಾಗೃತಿ ಮೇಳ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ನಿಗಮದ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ ಯಂತ್ರವನ್ನು ಅಳವಡಿಸಲಾಗಿದ್ದು, ಹಂತ ಹಂತವಾಗಿ ಎಲ್ಲ ಘಟಕಗಳಿಗೂ ವಿಸ್ತರಿಸಲಾಗುವುದು ಎಂದರು. ಅಭಿಯಾನದ ಅಂಗವಾಗಿ ನಿಷೇಧಿತ ಪ್ಲಾಸ್ಟಿಕ್‌ ಸೇರಿದಂತೆ 131 ಕೆ.ಜಿ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. ಅಭಿಯಾನದಲ್ಲಿ ಸೇಂಟ್‌ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next