Advertisement

ಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

02:20 PM May 13, 2022 | Niyatha Bhat |

ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಗಳಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|ಸೆಲ್ವಮಣಿ ಎಚ್ಚರಿಕೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯಕ್ರಮದ ಅನುಷ್ಠಾನದ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕೆಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಜನೆಯಡಿ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿಲ್ಲ. ಅಂತಹ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್‌ ಜಾರಿಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಹಣಕಾಸಿನ ಸೌಲಭ್ಯ ದೊರೆಯುವುದು ವಿಳಂಬವಾಗಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಪ್ರಸ್ತುತ ಹಣಕಾಸು ವರ್ಷದ ಆರಂಭದಲ್ಲಿಯೇ ಕ್ರಿಯಾ ಯೋಜನೆ ಸಿದ್ಧಪಡಿಸುವುದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವುದು, ಟೆಂಡರ್‌ ಪ್ರಕ್ರಿಯೆಗೆ ಸಿದ್ಧತೆಗಳನ್ನು ಕೈಗೊಳ್ಳಬೇಕು. ಅನುದಾನ ಬಿಡುಗಡೆಯಾದ ತಕ್ಷಣ ಅನುಷ್ಠಾನ ಕಾರ್ಯ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಎಸ್‌ಸಿಪಿ/ಟಿಎಸ್‌ಪಿ ಅನುದಾನ ಲೋಪವಾಗಲು ಬಿಡಬಾರದು. ಅನುದಾನ ಲೋಪ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಎಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಾಗಿರಿಸುವ ಅನುದಾನವನ್ನು ಬೇರೆ ಯೋಜನೆಗಳಿಗೆ, ಕಾಮಗಾರಿಗಳಿಗೆ ಬಳಕೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಎಲ್ಲಾ ಇಲಾಖೆಗಳು ಈ ಕುರಿತು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜು, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್‌, ಎಲ್ಲಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next