ಶಹಾಪುರ: ನಗರಸಭೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನ ಅನುದಾನದಡಿ ಸಿಸಿ ರಸ್ತೆ, ಚರಂಡಿ ಕಾಮಗಾರಿ ಕೈಗೊಂಡು ಆರೇಳು ತಿಂಗಳೂ ಗತಿಸಿದರೂ ಕಾಮಗಾರಿ ಪೂರ್ಣಗೊಳ್ಳದಿರುವುದನ್ನು ಕಂಡು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅಸಮಾಧಾನ ವ್ಯಕ್ತಪಡಿಸಿದರು.
ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಶೇ. 40ರಷ್ಟು ಸಹ ಕಾಮಗಾರಿಯಲ್ಲಿ ಪ್ರಗತಿ ಕಂಡು ಬಾರದ ಕಾರಣ ಅವರು ಬೇಸರ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ವಾರ್ಡ್ ನಂ. 10 ಮತ್ತು 8 ಹಾಗೂ ಇತರೆ ಭಾಗಗಳಲ್ಲಿ ನಡೆದ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮಾಹಿತಿ ಪಡೆದುಕೊಂಡ ಅವರು, 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿಗಳು ಇನ್ನೂ ಪರಿಪೂರ್ಣವಾಗದೆ, 14 ಕಾಮಗಾರಿಗಳು ಬಾಕಿ ಉಳಿದಿವೆ. ನಗರಸಭೆ ಅಧಿಕಾರಿಗಳು ಗಮನ ಹರಿಸದೆ ಇರುವುದು ಕಾರಣವಾಗಿದ್ದು, ಸಂಬಂಧಪಟ್ಟ ಇಂಜಿನಿಯರ್, ಗುತ್ತೆಗೆದಾರರು, ಸರ್ಕಾರದ ನಿಯಮಗಳನ್ವಯ ಕಾಮಗಾರಿ ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಇನ್ನೂ ಅನೇಕ ಸಮಸ್ಯೆಗಳಿದ್ದು, ಅಧಿಕಾರಿಗಳು ಅರಿತುಕೊಂಡು ತಕ್ಷಣವೇ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಬಸವರಾಜ ಶಿವಪೂಜೆ, ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಎಇಇ ಪೂಜಾರಿ, ಮತ್ತು ಜೆ.ಇ. ಬಕ್ಕಪ್ಪ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಇದ್ದರು.