ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದರೆ, ಮತ್ತೊಂದೆಡೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಪ್ತ, ಉತ್ತರಪ್ರದೇಶ ಸಂಸದ ರಾಜೇಂದ್ರ ಅಗರ್ ವಾಲ್ ಮತ್ತವರ ತಂಡ ಮೈಸೂರಿನಲ್ಲಿ ಬೀಡು ಬಿಡುವ ಮೂಲಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ರಣತಂತ್ರ ಹೆಣೆಯುತ್ತಿದೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ರಾಜೇಂದ್ರ ಅಗರ್ ವಾಲ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸೋದೇ ನಮ್ಮ ಮುಖ್ಯ ಗುರಿ ಎಂದು ಹೇಳಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಸೇರಿದಂತೆ ನಾಲ್ಕು ಕ್ಷೇತ್ರಗಳ ಉಸ್ತುವಾರಿ ತನಗೆ ನೀಡಿರುವುದಾಗಿ ಅಗರ್ ವಾಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ನಿಟ್ಟಿನಲ್ಲಿ ರಾಜೇಂದ್ರ ಅಗರ್ ವಾಲ್ ಇಂದು ಬಿಜೆಪಿ ಪಕ್ಷದ ಮುಖಂಡರು, ಸಂಸದರ ಜತೆ ಚರ್ಚೆ ನಡೆಸಿದರು. ಎಲ್ಲಾ ಮಾಹಿತಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ 5 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಳಿಕ ವರುಣಾ ಕ್ಷೇತ್ರ ಆಯ್ದುಕೊಂಡಿದ್ದು, ಇದೀಗ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಬಿಜೆಪಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಡಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.