ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ. ಶಕ್ತಿ ಯೋಜನೆಯ ಮಾರ್ಗಸೂಚಿಗಳನ್ನು ಇಲ್ಲಿ ಸೂಚಿಸಲಾಗಿದೆ.
ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಹೊಂದಿರಬೇಕು ಎಂದು ಸರ್ಕಾರ ಸೂಚಿಸಿದೆ.
ಈ ಯೋಜನೆಯು ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯಿಸುವುದು.
ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎ.ಸಿ ಸ್ಲೀಪರ್ ಹಾಗೂ ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ ಬಸ್ ಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.
ಬಿಎಂಟಿಸಿ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಬಸ್ ಗಳಲ್ಲಿ (ಎಸಿ, ಐಷಾರಾಮಿ ಮತ್ತು ಅಂತಾರಾಜ್ಯ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.
ಉಚಿತ ಪ್ರಯಾಣಕ್ಕೆ ಮಹಿಳೆಯರು
‘ಶಕ್ತಿ ಸ್ಮಾರ್ಟ್ ಕಾರ್ಡ್’ ಗಳನ್ನು ಪಡೆಯಬೇಕು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಹಾಕಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಪಡೆಯಬೇಕು. ಮುಂದಿನ ಮೂರು ತಿಂಗಳು ಕಾಲ ಇದಕ್ಕೆ ಅವಕಾಶವಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಪರಿಗಣಿಸಲಾಗುತ್ತದೆ.