ಮೈಸೂರು: ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡದಂತೆ ಜಾಗತಿಕ ಲಿಂಗಾಯಿತ ಮಹಾಸಭಾ ಒತ್ತಾಯಿಸಿದೆ.
ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪಲಿಂಗಾಯಿತ ಧರ್ಮದ ವಿರೋಧಿಯಾಗಿದ್ದಾರೆ. ಅಲ್ಲದೆ ವೃದ್ಧರಾಗಿರುವ ಅವರಿಗೆ ಅಧಿಕಾರ ನೀಡಿದರೆ ಕರ್ತವ್ಯ ನಿರ್ವಹಿಸಲು ಕಷ್ಟವಾಗಲಿದೆ.
ಹೀಗಾಗಿ ಅಂತಹವರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹದೇವಪ್ಪಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಅಲ್ಲದೇ ಪ್ರಾದೇಶಿಕ ನ್ಯಾಯಕ್ಕಾಗಿ ಹೈದರಾಬಾದ್ ಕರ್ನಾಟಕ ಪ್ರತಿನಿಧಿಯೊಬ್ಬರಿಗೆ ಉನ್ನತ ಹುದ್ದೆ ನೀಡಬೇಕಾಗಿದೆ.
ಮುಖ್ಯವಾಗಿ ಜೆಡಿಎಸ್-ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯದ 20 ಮಂದಿ ಶಾಸಕರು ಆಯ್ಕೆಯಾಗಿದ್ದು, ನಮ್ಮ ಧರ್ಮದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು.
ಹೀಗಾಗಿ ಲಿಂಗಾಯಿತ ಪ್ರತ್ಯೇಕ ಧರ್ಮಕ್ಕಾಗಿ ಮಂಚೂಣಿಯಲ್ಲಿ ಹೋರಾಡಿದ ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ಡಿಸಿಎಂ ಹುದ್ದೆ ನೀಡಬೇಕಿದೆ. ಮತ್ತೂಂದೆಡೆ ಡಾ.ಪರಮೇಶ್ವರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಮುಖಂಡರಾದ ಲೋಕೇಶ್ ಹಾಜರಿದ್ದರು.