ಬೆಂಗಳೂರು: ಬೆಂಗಳೂರಿಗೆ ಲಿಂಗನಮಕ್ಕಿ ಜಲಾಶಯದಿಂದ ನೀರು ತರುವ ಸರ್ಕಾರದ ಚಿಂತನೆಗೆ ಸ್ಥಳೀಯ ಕಾಂಗ್ರೆಸ್ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ. ಬುಧವಾರ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದ ನಿಯೋಗ ಯೋಜನೆ ಕೈ ಬಿಡುವಂತೆ ಆಗ್ರಹಿಸಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಮನವಿ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ರಾಜ್ಯ ಸರ್ಕಾರ ಶರಾವತಿಯಿಂದ ಬೆಂಗಳೂರಿಗೆ ನೀರು ತರುವ ಚಿಂತನೆ ನಡೆಸಿದೆ.
ಈ ಯೋಜನೆಯ ಸಂಪೂರ್ಣ ವರದಿ ಸಿದ್ಧಪಡಿಸುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹೀಗಾಗಿ, ಈ ಯೋಜನೆ ಕಾರ್ಯಸಾಧುವಲ್ಲ ಎಂದು ಪಕ್ಷದ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗೆ ವಿವರಿಸಿದ್ದೇವೆ ಎಂದರು.
ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ 1,250 ಅಡಿ ಮೇಲಕ್ಕೆ ನೀರು ತರುವುದಕ್ಕೆ ಸಾಧ್ಯವಿಲ್ಲ. ಜೊತೆಗೆ, ಯೋಜನೆ ಜಾರಿಯಾದರೆ ಸ್ಥಳೀಯರಿಗೆ, ದನಕರುಗಳಿಗೆ ನೀರಿಲ್ಲದಂತಾಗುತ್ತದೆ. ಹೀಗಾಗಿ, ಯೋಜನೆಯನ್ನು ಕೈಬಿಡುವಂತೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯ ಸರ್ಕಾರದ ಈ ನಿರ್ಧಾರ ಖಂಡಿಸಿ ಜುಲೈ 10ರಂದು ಶಿವಮೊಗ್ಗ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು.
ಶಿವಮೊಗ್ಗ ಮಾಜಿ ಶಾಸಕ ಚಂದ್ರಶೇಖರ್, ನಗರ ಅಧ್ಯಕ್ಷ ತಶ್ರಿಫ್ ಇಬ್ರಾಹಿಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೈಕೆಲ್ ಡಿಸೋಜಾ ಜೊತೆಯಲ್ಲಿದ್ದರು.