ಪುತ್ತೂರು: ಮುಖ್ಯಮಂತ್ರಿಗಳ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ ಕುತ್ಲೂರಿನಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ. ಗ್ರಾಮಸ್ಥರ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಈಡೇರಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸೂಚಿಸಿದರು. ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ. 23ರಂದು ನಡೆಯುವ ಗ್ರಾಮ ವಾಸ್ತವ್ಯ, ಉಚಿತ ವೈದ್ಯಕೀಯ ಶಿಬಿರದ ಹಿನ್ನೆಲೆಯಲ್ಲಿ ಪುತ್ತೂರು ಮಿನಿ ವಿಧಾನಸೌಧದಲ್ಲಿ ಡಿ. 17ರಂದು ಸಂಜೆ ನಡೆದ ಸಭೆಯಲ್ಲಿ ಮಾತನಾಡಿದರು.
ಗ್ರಾಮ ವಾಸ್ತವ್ಯದ ಸಂದರ್ಭ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯ ಕುರಿತು ಸ್ಥಳದಲ್ಲೇ ಕ್ರಮ ತೆಗೆದುಕೊಳ್ಳಬೇಕು. ಎಲ್ಲ ಇಲಾಖಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಕೆಲಸಗಳನ್ನು ಮಾಡಿಕೊಡಬೇಕು. ಗ್ರಾಮದ ಜನರೊಂದಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು, ಸಂಘ ಸಂಸ್ಥೆಗಳ ಜತೆಯಾಗಿ ಗ್ರಾಮದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸುವ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನ ಇದಾಗಿದೆ ಎಂದರು.
ಡಿ. 23ರಂದು ಪೂರ್ವಾಹ್ನ 10 ಗಂಟೆಗೆ ಕುತ್ಲೂರಿನಲ್ಲಿ ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸೂಕ್ತ ಬಂದೋ ಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಮಾಡಬೇಕು. ಸಂವಾದದಲ್ಲಿ ಗ್ರಾಮಸ್ಥರು ಸಲ್ಲಿಸುವ ಬೇಡಿಕೆಗಳನ್ನು ಸರಿಯಾಗಿ ಮನದಟ್ಟು ಮಾಡಿ ಉತ್ತರ ನೀಡಬೇಕು ಎಂದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲೆಯ 80 ಪತ್ರಕರ್ತರು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉದ್ಘಾಟನೆ ಬಳಿಕ ಎ.ಜೆ. ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ಶಿಬಿರ ನಡೆಯಲಿದೆ. ಬಳಿಕ ಎರಡು ಅವಧಿಗಳಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮತ್ತು ಇತರ ಜನಪ್ರತಿನಿಧಿಗಳೊಂದಿಗೆ ಗ್ರಾಮಸ್ಥರು ಸಂವಾದ ನಡೆಸಲಿದ್ದಾರೆ. ಕುತ್ಲೂರಿನ ಹಿರಿಯರೊಂದಿಗೆ ಚಾವಡಿ ಚರ್ಚೆಯನ್ನು ಆಯೋಜಿಸಲಾಗಿದೆ. ರಾತ್ರಿ 20 ಪತ್ರಕರ್ತರು ಮಾತ್ರ ಗ್ರಾಮ ವಾಸ್ತವ್ಯ ನಡೆಸುತ್ತಾರೆ. ಗ್ರಾಮ ವಾಸ್ತವ್ಯದ ಅಧ್ಯಯನ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದರು. ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್ ಅನಂತಶಂಕರ ಉಪಸ್ಥಿತರಿದ್ದರು.
ಉದ್ಘಾಟನೆ
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯ ಕ್ರಮವನ್ನು ಜಿಲ್ಲಾಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಉದ್ಘಾಟಿಸುವರು. ವೈದ್ಯಕೀಯ ಶಿಬಿರವನ್ನು ಜಿ.ಪಂ. ಸಿಇಒ ಡಾ| ಸೆಲ್ವಮಣಿ ಆರ್. ಉದ್ಘಾಟಿಸಲಿದ್ದಾರೆ. ಎಸ್ಪಿ ಡಾ| ಬಿ.ಆರ್. ರವಿಕಾಂತೇ ಗೌಡ ಸಂವಾದಕ್ಕೆ ಚಾಲನೆ ನೀಡುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ, ಮಂಗಳೂರು ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಉಪಸ್ಥಿತರಿರುವರು.