ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಬೇಕಿತ್ತು.
ಶನಿವಾರ ನಡೆದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಎಜಿ ಆಯ್ಕೆಯ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟುಕೊಡಲಾಗಿತ್ತು.
ಅದರಂತೆ, ಹೈಕೋರ್ಟ್‌ನ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಿದೆ.
ಹಿಂದಿನ ಜೆಡಿಎಸ್-ಸಮ್ಮಿಶ್ರ ಸರ್ಕಾರದಲ್ಲಿ ಉದಯ್ ಹೊಳ್ಳ ಅಡ್ವೊಕೇಟ್ ಜನರಲ್ ಆಗಿದ್ದರು. ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರಭುಲಿಂಗ ಕೆ. ನಾವದಗಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲೂ ಅವರೇ ಎಜಿಯಾಗಿ ಮುಂದುವರಿದಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಶಶಿಕಿರಣ್ ಶೆಟ್ಟಿ ಅಡ್ವೊಕೇಟ್ ಜನರಲ್ ಆಗಲಿದ್ದಾರೆ.