Advertisement

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ

05:22 PM Dec 06, 2019 | Team Udayavani |

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಗುರುವಾರ ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಆವರಣದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿರುವ ಇರುವ ಸರ್ಕಾರಿ ಶಾಲೆಗಳ ದುರಸ್ತಿಗೆ ಅನುದಾನ ಒದಗಿಸಲು ಯಾವುದೇ ಅವಕಾಶ ಇರುವುದಿಲ್ಲ. ಆದರೆ ಇದೇ ಮೊದಲ ಬಾರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳ ದುರಸ್ತಿಗೆ ಸರ್ಕಾರದಿಂದ ಮಹಾನಗರ ಪಾಲಿಕೆಗೆ ಅನುದಾನ ಒದಗಿಸಲಾಗಿದೆ. ಇದೇ ರೀತಿ ರಾಜ್ಯದ ಎಲ್ಲಾ ನಗರ ವ್ಯಾಪ್ತಿಯ ಶಾಲೆಗಳ ದುರಸ್ತಿಗೆ ಅನುದಾನ ಒದಗಿಸುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಶಾಲೆಗಳಲ್ಲಿ 47 ಶೌಚಾಲಯಗಳ ನಿರ್ಮಾಣಕ್ಕೆ ಸಹ ಅನುದಾನ ಒದಗಿಸಲಾಗಿದೆ. ಈ ಶೌಚಾಲಯಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆಯನ್ನು ಆಯಾ ಶಾಲಾಭಿವೃದ್ಧಿ ಸಮಿತಿಯವರು ಮಾಡಿಕೊಳ್ಳಬೇಕು. ದುರಸ್ತಿ ಕಾಮಗಾರಿಗಳಿಗೆ ನೀಡಿರುವ ಅನುದಾನದ ಸಮರ್ಪಕ ಬಳಕೆಯಾಗಬೇಕಾದರೆ ಶಿಕ್ಷಕರು, ಪಾಲಕರು ಮಾತ್ರವಲ್ಲದೆ ಸಾರ್ವಜನಿಕರ ಜವಾಬ್ದಾರಿಯೂ ಇದೆ.

ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಖಾತ್ರಿಪಡಿಸಬೇಕು. ನಮ್ಮ ಸರ್ಕಾರಿ ಶಾಲೆಗಳು ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಸಚಿವರು ಹೇಳಿದರು.

Advertisement

ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಹಲವು ಮೂಲಸೌಕರ್ಯ ಒದಗಿಸುವ ಕಾಮಗಾರಿಗಳು ನಡೆಯುತ್ತಿವೆ. 100 ಉದ್ಯಾನಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ 35 ಉದ್ಯಾನಗಳ ಕಾಮಗಾರಿ ಟೆಂಡರ್‌ ಹಂತದಲ್ಲಿದೆ. ನಗರದಲ್ಲಿರುವ ಎಲ್ಲಾ 24 ಸ್ಮಶಾನಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್‌ ಸದಸ್ಯರಾದ ರುದ್ರೇಗೌಡ ಹಾಗೂ ಪ್ರಸನ್ನ ಕುಮಾರ್‌ ಅವರು ಮಾತನಾಡಿದರು. ಮಹಾನಗರ ಪಾಲಿಕೆ ಮೇಯರ್‌ ಲತಾ ಗಣೇಶ್‌, ಉಪ ಮೇಯರ್‌ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಎಂ.ಎಲ್‌. ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಪೀಠೊಪಕರಣ ಒದಗಿಸಲು ಮುಂದೆ ಬಂದಿರುವ ಎನ್‌ ಇಎಸ್‌ ಶಿಕ್ಷಣ ಸಂಸ್ಥೆಗಳ ನಾಗರಾಜ್‌, ವಿಶ್ವನಾಥ್‌, ಅಶ್ವಥನಾರಾಯಣ, ಪಾಲಿಕೆ ಸದಸ್ಯರು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next