ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಅನೇಕ ಕಾಮಗಾರಿಗಳನ್ನು ಜಾರಿಗೊಳಿಸುವಲ್ಲಿ ದಿನೇ ದಿನೆ ದಾಪುಗಾಲು ಹಾಕುತ್ತಿರುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪತ್ರಿಕಾ ಭವನದಲ್ಲಿ ಬುಧವಾರ ಪ್ರಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಇಲಾಖೆಯಿಂದ ವಿಶೇಷವಾಗಿ ಎಲ್ಲ ರೀತಿಯ ಪ್ರಯತ್ನ ನಡೆಸಿ ಸಂಕಷ್ಟದಲ್ಲಿರುವ ಜನರಿಗೆ ಉದ್ಯೋಗ ದೊರಕಿಸಿಕೊಡಲಾಗಿದೆ ಎಂದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ರಾಜ್ಯದ ಎಲ್ಲ ಗ್ರಾಮೀಣ ಭಾಗದಲ್ಲಿ ಉದ್ಯೋಗ ಹಾಗೂ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಸಲಾಗಿದೆ. ರಾಜ್ಯದ 49 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿತ್ತು. ತಾಲೂಕಿಗೆ ಕುಡಿಯುವ ನೀರು ಪೂರೈಕೆಗೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಇನ್ನುಳಿದ ತಾಲೂಕುಗಳಿಗೆ ತಲಾ 50 ಲಕ್ಷ ರೂ. ಕುಡಿಯುವ ನೀರು ಪೂರೈಕೆಗಾಗಿ ಬಿಡುಗಡೆ ಮಾಡಲಾಗಿದೆ. ಯಾವುದೇ ಜಿಲ್ಲೆಯಲ್ಲಿ ಉದ್ಯೋಗಕ್ಕೆ ಸಮಸ್ಯೆ ಇಲ್ಲ. ಪ್ರತಿ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳ ಮಾಡುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಇಲಾಖೆ ಎದುರು ಸಾಕಷ್ಟು ಸವಾಲು ಇದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರೀಕ್ಷೆಗೂ ಮೀರಿ ಬೆಂಬಲ ನೀಡುತ್ತಿವೆ. ನರೇಗಾ ಯೋಜನೆ ರಾಜ್ಯದ ಜನತೆಗೆ ಆಪತಾºಂಧವ ಯೋಜನೆಯಾಗಿದೆ. ರಾಜ್ಯದಲ್ಲಿ ಮೇ 26ರಂದು ಒಂದೇ ದಿನ ಸರಿಸುಮಾರು 9.26ಲಕ್ಷ ಜನರಿಗೆ ಉದ್ಯೋಗ ದೊರಕಿಸಿ ಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಇಲಾಖೆಯಿಂದ ಕೊಡಬೇಕಾದ ಬಾಕಿ ಕೂಲಿ ಹಾಗೂ ಮೆಟೀರಿಯಲ್ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಕಳೆದ ತಿಂಗಳು ಕೇಂದ್ರ ಸರ್ಕಾರ ನರೇಗಾ ಯೋಜನೆಗಾಗಿ 1,861 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿ 800 ಕೋಟಿ ರೂ. ಬಾಕಿ ಮೊತ್ತ ಬಿಡುಗಡೆ ಮಾಡಲಾಗಿದೆ. ಉಳಿದ ಒಂದು ಸಾವಿರ ಕೋಟಿ ರೂ.ನಲ್ಲಿ ನರೇಗಾ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನರೇಗಾ ಯೋಜನೆ ಅಡಿ ಕೆಲಸ ಮಾಡಿದವರಿಗೆ ಒಂದು ವಾರದಲ್ಲಿ ಅವರ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರದಿಂದ ನೇರವಾಗಿ ಹಣ ಜಮಾ ಆಗುತ್ತದೆ ಎಂದರು.
ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಅಡಿ 249 ರೂ. ಕೂಲಿ ನೀಡಲಾಗುತ್ತಿತ್ತು. ಇದೀಗ ಅದನ್ನು 275 ರೂ.ಗೆ ಹೆಚ್ಚಳ ಮಾಡಲಾಗಿದೆ. ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರು ಹಾಗೂ ತೆರಿಗೆ ಸಂದಾಯ ಮಾಡುವವರನ್ನು ಹೊರತುಪಡಿಸಿ ಯಾರು ಬೇಕಾದರೂ ನರೇಗ ಯೋಜನೆ ಜಾಬ್ ಕಾರ್ಡ್ ಪಡೆಯಬಹುದಾಗಿದೆ ಎಂದರು. ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಇಒ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.