ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಸಿ ದುಡಿಮೆಯಲ್ಲಿ ತೊಡಗಿಸುವುದು ಸಂವಿಧಾನದ ವಿರುದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಆಡಳಿತ ಮತ್ತು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಆಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ನಿರೀಕ್ಷಕರಿಗೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಗು ಕುಟುಂಬದ ಭಾಗವಾಗಿದ್ದು, ಕುಟುಂಬದ ಪ್ರೀತಿ, ಪಾಲನೆ, ಗೌರವ, ರಕ್ಷಣೆ ಹಾಗೂ ಭದ್ರತೆಗೆ ಅರ್ಹವಾಗಿರುತ್ತದೆ. ಆದರೆ ಬಾಲ ಕಾರ್ಮಿಕ ಹಾಗೂ ಕಿಶೋರಾವಸೆœಯ ಕಾರ್ಮಿಕ ಪದ್ಧತಿಯು ಮಾನವ ಹಕ್ಕುಗಳ ಉಲ್ಲಂಘನೆಯ ನಿಕೃಷ್ಟ ಅಂಶವಾಗಿದೆ. ಈ ಪದ್ಧತಿಯಿಂದಾಗಿ ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರನ್ನು ಶಿಕ್ಷಣದ ಅವಕಾಶದಿಂದ ವಂಚಿತರನ್ನಾಗಿಸುತ್ತಿದೆ. ಮಕ್ಕಳಿಂದ ದುಡಿಸಿಕೊಳ್ಳುವುದು ಭಾರತದ ಸಂವಿಧಾನ ಆಶಯಕ್ಕೆ ವಿರುದ್ಧವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಯ ಕಾಯ್ದೆಗಳಾದ ಶಿಕ್ಷಣ ಹಕ್ಕು ಕಾಯ್ದೆ, ಬಾಲನ್ಯಾಯ ಕಾಯ್ದೆ ಹಾಗೂ ಬಾಲ್ಯವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಹಿನ್ನೆಲೆ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯಕವಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಈರಣ್ಣ ಎಸ್. ಪಂಚಾಳ ಮಾತನಾಡಿ, ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ರನ್ವಯ 14 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಸೇರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತವರನ್ನು ನೇಮಿಸಿಕೊಂಡ ಮಾಲೀಕರು 50 ಸಾವಿರ ರೂ.ವರೆಗೆ ದಂಡ ಅಥವಾ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು.
ತಹಶೀಲ್ದಾರ್ ಡಾ| ಶ್ರೀಪಾದ ಬಿ. ಶೆಟ್ಟಿ ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಪೊಲೀಸ್ ಅಧಿಧೀಕ್ಷಕ ಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ಎನ್. ರಮೇಶ್ ಮತ್ತಿತರರು ಇದ್ದರು.