ಶಿವಮೊಗ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಡು ಪ್ರಾಣಿ ಬೇಟೆ ಮತ್ತು ಮರಗಳ್ಳತನದ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ತಡೆಯಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಹೊಸ ಒತ್ತುವರಿಯನ್ನು ತಡೆಯುವುದು, ಹಸಿರು ಪ್ರದೇಶದ ರಕ್ಷಣೆ, ಅರಣ್ಯಕ್ಕೆ ಬೆಂಕಿ ಬೀಳದಂತೆ ನಿಗಾ ವಹಿಸುವುದನ್ನು ಚುರುಕುಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಸಮಿತಿ ರಚನೆ: ಕಳೆದ ಮುಂಗಾರು ಸಂದರ್ಭದಲ್ಲಿ ರಾಜ್ಯದ ಹಲವೆಡೆಗಳಲ್ಲಿ ಭೂ ಕುಸಿತ ಉಂಟಾಗಿ ಅಪಾರ ಹಾನಿಯಾಗಿರುವ ಹಿನ್ನೆಲೆಯಲ್ಲಿ, ಭೂ ಕುಸಿತದ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ತಮ್ಮ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಸಮಿತಿಯು ಭೂಕುಸಿತ ಸಂಭವಿಸಿದ ಎಲ್ಲಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ ಎಂದು ಅವರು ಹೇಳಿದರು.
ಮಂಗನ ಕಾಯಿಲೆ ನಿಯಂತ್ರಣ: ಮಂಗನ ಕಾಯಿಲೆ ನಿಯಂತ್ರಣ ಕುರಿತು ಹಲವಾರು ಇಲಾಖೆಗಳಿಂದ ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಸಂಶೋಧನೆಗಳು ಕೂಡ ಮುಂದುವರಿದಿವೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಭೆಯನ್ನು ಕರೆದು, ಮಂಗನ ಕಾಯಿಲೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಗಿರುವ ಪ್ರಯತ್ನಗಳ ಬಗ್ಗೆ ಸಮಾಲೋಚನೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹಸಿರು ವಲಯ ನಿರ್ಮಿಸಲು ಅನುದಾನ ಕಾಯ್ದಿರಿಸಲಾಗಿದೆ. ಹಸಿರೀಕರಣ ಕಾರ್ಯವನ್ನು ಜೂನ್ ತಿಂಗಳಿನ ಆರಂಭದಲ್ಲಿಯೇ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಸೂಡಾ ಲೇಔಟ್ ವ್ಯಾಪ್ತಿಯಲ್ಲಿರುವ ಬಫರ್ ಜೋನ್ ಗಳಲ್ಲಿ ಸಸಿಗಳನ್ನು ನೆಡುವ ಸಲಹೆ ನೀಡಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.