ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, ನಿಗದಿತ ಅವ ಧಿಯ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಜಿಲ್ಲಾ ಕಾರಿ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರತಿಯೊಂದು ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಸ್ಮಾರ್ಟ್ ಸಿಟಿ, ಅಮೃತ್ ಯೋಜನೆ, ಕರ್ನಾಟಕ ನಗರ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ತಿಂಗಳು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು. ನಿಗದಿಪಡಿಸಲಾದ ಮಾಸಿಕ ಪ್ರಗತಿಯನ್ನು ಸಾಧಿಸಬೇಕು. ಕಾಮಗಾರಿ ಅನುಷ್ಠಾನದಲ್ಲಿ ತೊಡಕು ಉಂಟಾದರೆ ಸ್ಥಳೀಯವಾಗಿ ಬಗೆಹರಿಸಿಕೊಳ್ಳಬೇಕು. ಯಾರಾದರೂ ಅಡಚಣೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ. ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸ್ಮಾರ್ಟ್ ಸಿಟಿ ಕಾಮಗಾರಿ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.
ಪ್ರಗತಿ ವಿವರ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಇದುವರೆಗೆ ಎರಡು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 54 ಕೋಟಿ ರೂ. ವೆಚ್ಚ ಮಾಡಲಾಗಿದೆ. 731 ಕೋಟಿ ರೂ. ವೆಚ್ಚದಲ್ಲಿ ಒಟ್ಟು 27 ಕಾಮಗಾರಿಗಳು ಪ್ರಗತಿಯಲ್ಲಿವೆ. 14 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. ಪ್ರತಿ ಕಾಮಗಾರಿ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಅಶೋಕ ಹೊಟೇಲ್‌ನಿಂದ ಅಲ್ಕೊಳ ವೃತ್ತದವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ಗ್ರಾಮೀಣ ಪೊಲೀಸ್ ಠಾಣೆ ಬಳಿ ಸುಮಾರು 200 ಮೀಟರ್ ಸ್ಥಳ ಬಿಟ್ಟು ಕೊಡಲು ಇಲಾಖೆ ಒಪ್ಪಿಕೊಂಡಿದ್ದು, ಪೈಪ್ ಲೈನ್ ಕಾಮಗಾರಿ ಒಂದು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ. 2.7 ಕಿಮೀ ಉದ್ದದ ಹೆರಿಟೇಜ್ ವಾಕ್ ಕಾಮಗಾರಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ತುಂಗಾ ನದಿ ದಂಡೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ. ಇಮಾಂಬಾಡದಲ್ಲಿ ಈಗಾಗಲೇ 32 ಮನೆಗಳಿಗೆ ಬೇರೆ ಕಡೆ ಹಕ್ಕುಪತ್ರ ನೀಡಲಾಗಿದ್ದು, ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಟಾರೆ ಮತ್ತಿತರರು ಇದ್ದರು.