Advertisement

ಪೆಟ್ರೋಲ್‌- ಡೀಸೆಲ್‌ ಬೆಲೆ ಏರಿಕೆಗೆ ವಿರೋಧ

07:02 PM Jul 08, 2020 | Naveen |

ಶಿವಮೊಗ್ಗ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ನಿರಂತರವಾಗಿ ಏರಿಸುತ್ತಿರುವುದನ್ನು ವಿರೋಧಿಸಿ ಎನ್‌ಎಸ್‌ಯುಐ ಜಿಲ್ಲಾ ಶಾಖೆ ಕಾರ್ಯಕರ್ತರು ಮಂಗಳವಾರ ಸೈಕಲ್‌ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Advertisement

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಜನರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಾಗುತ್ತಿದೆ. ದೇಶದ ಜನತೆ ಈಗಾಗಲೇ ಕೋವಿಡ್ ಸಂಕಷ್ಟದಿಂದ ಕೆಲಸವಿಲ್ಲದೆ ಜೀವನ ನಡೆಸುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ಪ್ರತಿಭಟ ನಾಕಾರರು ಖಂಡಿಸಿದರು. ಪೆಟ್ರೋಲ್‌ ಮತ್ತು ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟ ಮಾತನ್ನು ಮರೆತಿದೆ. ಇತ್ತ ಉದ್ಯೋಗ ಸೃಷ್ಟಿಯೂ ಇಲ್ಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗುತ್ತಿದೆ ಎಂದು ದೂರಿದರು.

ಕೋವಿಡ್ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ವ್ಯಾಪಾರ ವಹಿವಾಟು ಕಡಿಮೆಯಾಗಿದೆ. ಬಡ, ಮಧ್ಯಮ ವರ್ಗದ ಜನರು ಕೆಲಸವಿಲ್ಲದೇ ದಿನ ಕಳೆಯುತ್ತಿದ್ದಾರೆ. ಉದ್ಯೋಗವಂತ ಯುವ ಜನತೆ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರ ಮನಸ್ಸಿಗೆ ಬಂದಂತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕೂಡಲೇ ಇಳಿಸಬೇಕು. ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕೆ. ಚೇತನ್‌, ಎಚ್‌.ಎಸ್‌. ಬಾಲಾಜಿ, ವಿನಯ್‌ ವಿಜಯ್‌, ರವಿ, ವಿನ್ಯಾಸ್‌, ಅಬ್ದುಲ್‌ ಸತ್ತಾರ್‌, ಗಿರೀಶ್‌, ಸಂದೀಪ್‌, ಪ್ರಮೋದ್‌ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next