ಶಿವಮೊಗ್ಗ: ಸ್ಮಾರ್ಟ್‌ಸಿಟಿ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಟ್ಟಡಗಳು ಹಾಗೂ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಇರಬಹುದಾದ ತೊಡಕುಗಳ ನಿವಾರಣಗೆ ಫೆ.4ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ಮಣಿವಣ್ಣನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಮಳೆಹಾನಿ ಪರಿಹಾರ ಹಾಗೂ ಇತರೆ ಯೋಜನೆಗಳ ಅನುಷ್ಠಾನಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಮಾರು 296ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ನೆರವಿನೊಂದಿಗೆ ನಿರ್ಮಿಸಲು ಉದ್ದೇಶಿಸಿರುವ ವರ್ತುಲ ರಸ್ತೆ ಕಾಮಗಾರಿಗೆ ಸಂಬಂಧಿ ಸಿದಂತೆ ಕಡತ ಅನುಮೋದನೆಗಾಗಿ ಸರ್ಕಾರದ ಹಂತದಲ್ಲಿದ್ದು, ಶೀಘ್ರದಲ್ಲಿ ಅನುಮೋದನೆ ದೊರೆತು ಕಾಮಗಾರಿ ಆರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಜಿಲ್ಲೆಗೆ ಸುಮಾರು 109ಕೋಟಿ ರೂ.ಗಳ ವೆಚ್ಚದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಾಗಿದೆ. ಈ ಕಡತವು ದೆಹಲಿಯಲ್ಲಿದ್ದು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಮನೆಗಳ ದುರಸ್ತಿ, ಪುನರ್ ನಿರ್ಮಾಣ, ಜಾನುವಾರುಗಳ ಜೀವಹಾನಿ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿರುವ ಅನುದಾನ ಮತ್ತು ಸ್ಮಶಾನ ಭೂಮಿಗಳ ಅಭಿವೃದ್ಧಿ, ಶಾಲಾ ಕಟ್ಟಡಗಳ ದುರಸ್ತಿ ಇತ್ಯಾದಿಗಳ ಕುರಿತಂತೆ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್ ಅವರಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಅಭಿವೃದ್ಧಿಯಾಗಿರುವ, ಪೂರ್ಣಗೊಳಿಸಿರುವ ಹಾಗೂ ಮಾದರಿಯಾಗಿರುವ ಕಾಮಗಾರಿಗಳು ಹಾಗೂ ಅನುಷ್ಠಾನಗೊಳಿಸಿದ ಯೋಜನೆಗಳ ಮಾಹಿತಿಯನ್ನು ಟ್ವಿಟರ್ ಖಾತೆ ತೆರೆದು ಅದರಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಮಾಹಿತಿಯನ್ನು ಭರ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ವಿಮಾನ ನಿಲ್ದಾಣ ಕಾಮಗಾರಿ, ಗಾಂಧೀಭವನ ನಿರ್ಮಾಣದ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಅವರು, ನಗರದ ಪ್ರೀಢಂ ಪಾರ್ಕ್‌ನ ಪ್ರಗತಿ ಕಾರ್ಯವನ್ನು ಬರುವ ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅದಕ್ಕಾಗಿ ಕೂಡಲೇ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲು ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರಿಗೆ ಸೂಚಿಸಿದರು.
ಸರ್ಕಾರದ ವಿವಿಧ ಇಲಾಖೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಪ್ರತಿ ತಿಂಗಳ 10ರೊಳಗಾಗಿ ವೇತನ ಸೌಲಭ್ಯ ದೊರೆಯುವಂತಾಗಬೇಕು. ಅಲ್ಲದೆ ಅವರ ಪಿ.ಎಫ್., ಇತರೆ ಸೌಲಭ್ಯಗಳು ದೊರೆಯುವಂತಾಗಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಕಾರ್ಮಿಕ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸುವಂತೆ ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಇರುವ ಸಮಸ್ಯೆಗಳ ಇತ್ಯರ್ಥಕ್ಕಾಗಿ ತಕ್ಷಣ ತಮ್ಮ ಮೇಲಧಿಕಾರಿಗಳು, ಜಿಲ್ಲಾಧಿಕಾರಿಗಳು ಅಥವಾ ತಕ್ಷಣದ ತಮ್ಮ ಅಧಿಕಾರಿಗಳ ಗಮನಕ್ಕೆ ತಂದು ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಉತ್ತಮವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳನ್ನು
ಪ್ರಶಂಸಿಸಲಾಗುವುದು ಎಂದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಮತ್ತಿತರರು ಇದ್ದರು.