Advertisement

ಸ್ಮಾರ್ಟ್ ಸಿಟಿ; 50 ಕಾಮಗಾರಿಗೆ ಮಂಜೂರಾತಿ

03:51 PM Nov 22, 2019 | Team Udayavani |

ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆಯಡಿ 945 ಕೋಟಿ ರೂ. ಮೊತ್ತದ ಅಂದಾಜಿನ 50 ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದ್ದು, ಅನುಷ್ಠಾನ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದರು.

Advertisement

ಗುರುವಾರ ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅತಿವೃಷ್ಟಿಯಿಂದಾಗಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಕಳೆದ ಕೆಲವು ತಿಂಗಳಿನಲ್ಲಿ ನಿರೀಕ್ಷಿತ ವೇಗದಲ್ಲಿ ನಡೆದಿಲ್ಲ. ಇದೀಗ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದ್ದು,
ಅನುಷ್ಠಾ‌ ವೇಗ ಪಡೆದುಕೊಂಡಿದೆ. ಕಾಮಗಾರಿ ಅನುಷ್ಠಾನ ಇಲಾಖೆಗಳಾಗಿರುವ ಮೆಸ್ಕಾಂ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅರಣ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಅ ಧಿಕಾರಿಗಳೊಂದಿಗೆ ಪ್ರತಿ ವಾರ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಕಳಪೆ ಕಾಮಗಾರಿ ಕಂಡು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ 234 ಕೋಟಿ ರೂ. ವೆಚ್ಚದಲ್ಲಿ 3 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಟ್ಯಾಂಕ್‌ ಮೊಹಲ್ಲಾ ಉದ್ಯಾನವನ ಮತ್ತು ಇ-ಗ್ರಂಥಾಲಯ ಮೂಲ ಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ 15 ಕನ್ಸರ್ವೆನ್ಸಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. 7.83 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಾರ್ಕ್‌ ಹಾಗೂ ನೆಹರು ಸ್ಟೇಡಿಯಂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 9 ಶಾಲೆಗಳು, 2 ಕಾಲೇಜು ಮತ್ತು 4 ಗ್ರಂಥಾಲಯಗಳನ್ನು ಸ್ಮಾರ್ಟ್‌ ಲೈಬ್ರರಿಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. 538 ಕೋಟಿ ರೂ. ವೆಚ್ಚದಲ್ಲಿ 108 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಲ್ಲಿ 2.80 ಕಿಮೀ ಹೆರಿಟೇಜ್‌ ವಾಕ್‌ ಸೇರಿದೆ. 20 ಕೋಟಿ ರೂ. ವೆಚ್ಚದಲ್ಲಿ ಇನ್ನೂ 7 ಪಾರ್ಕ್‌ ಅಭಿವೃದ್ಧಿ ಮಾಡಲಾಗುತ್ತಿದೆ. 130 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿ ದಂಡೆ ಅಭಿವೃದ್ಧಿಗೆ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ. 123 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಟೆಂಡರ್‌ ಹಂತದಲ್ಲಿವೆ. 63ಕೋಟಿ ರೂ. ಮೊತ್ತದ ಕಾಮಗಾರಿಗಳು ಡಿಪಿಆರ್‌ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಗಾಂಧಿ ಪಾರ್ಕ್‌ ಅಭಿವೃದ್ಧಿ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಪಾರ್ಕ್‌ ಅಭಿವೃದ್ಧಿಪಡಿಸುವ ಕಾಮಗಾರಿ ಸದ್ಯದಲ್ಲಿಯೇ ಪ್ರಾರಂಭವಾಗಲಿದೆ. ಇಲ್ಲಿ 2.5ಎಕ್ರೆ ಪ್ರದೇಶದಲ್ಲಿ ವೈಲ್ಡ್‌ಲೈಫ್‌ ಇಂಟರ್‌ ಪ್ರಿಟೇಶನ್‌ ಸೆಂಟರ್‌, ಸೈನ್ಸ್‌ ಪಾರ್ಕ್‌ ಇತ್ಯಾದಿ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಗಾಂಧಿ ಪಾರ್ಕ್‌ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳಿಗೆ 10 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದರು.

Advertisement

ಪಿಆರ್‌ಒ ನೇಮಕ: ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುವಂತೆ ಸಾರ್ವಜನಿಕ ಸಂಪರ್ಕ ಅಧಿಕಾರಿ ನೇಮಕ ಮಾಡಲಾಗಿದೆ. ಸಾರ್ವಜನಿಕರು ಸ್ಮಾರ್ಟ್‌ ಸಿಟಿಗೆ ಸಂಬಂಧಿಸಿದಂತೆ  ಯಾವುದೇ ಅಹವಾಲುಗಳನ್ನು ಎಂ.ಕೆ. ರತ್ನಾಕರ, ಮೊ: 9448824926, 7892893334, 279951ನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಸ್ಮಾರ್ಟ್‌ ಸಿಟಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಚಿದಾನಂದ ವಟಾರೆ, ಮಹಾನಗರ ಪಾಲಿಕೆ ಮೇಯರ್‌ ಲತಾ ಗಣೇಶ್‌, ಉಪ ಮೇಯರ್‌ ಚನ್ನಬಸಪ್ಪ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next