Advertisement

ಎಸ್ಪಿ ಕಚೇರಿ ಸೀಲ್‌ಡೌನ್‌ ಆಗಿಲ್ಲ

01:16 PM May 21, 2020 | Naveen |

ಶಿವಮೊಗ್ಗ: ಕೋವಿಡ್‌ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿಲ್ಲ ಎಂದು ಡಿಸಿ ಕೆ.ಬಿ. ಶಿವಕುಮಾರ್‌ ಸ್ಪಷ್ಟಪಡಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್‌ ಅಧಿಕಾರಿಗಳು ಕ್ವಾರಂಟೈನ್‌ ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್‌ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿಲ್ಲ. ಆದರೆ ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11 ಮಂದಿ ಪೊಲೀಸ್‌ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ವಿಶೇಷ ಸಂದರ್ಭಗಳಲ್ಲಿ ಪೊಲೀಸ್‌ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸುವುದು ಸಾಮಾನ್ಯವಾಗಿದೆ. ಆದರೂ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊರ ಜಿಲ್ಲೆಯ ಅಧಿಕಾರಿಗಳು ಹೆಚ್ಚುವರಿ ಕರ್ತವ್ಯ ವಹಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಿಗೆ ನಿಗದಿತ ಅವಧಿಯಲ್ಲಿ ಸಂಪೂರ್ಣ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಪರೀಕ್ಷೆಯಲ್ಲಿ ಹೆಚ್ಚಳ: ಜಿಲ್ಲೆಯಲ್ಲಿ ಇದುವರೆಗೆ 5172 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಇದರ ಪೈಕಿ 4828 ಫಲಿತಾಂಶ ಬಂದಿದ್ದು, 320 ಬರಬೇಕಿದೆ. 4804 ನೆಗೆಟಿವ್‌ ಬಂದಿದೆ. ಹೊರ ರಾಜ್ಯಗಳಿಂದ ಆಗಮಿಸಿದ್ದ 1158 ಜನರನ್ನು ಕ್ವಾರಂಟೈನ್‌ ಮಾಡಿ ಪರೀಕ್ಷೆ ನಡೆಸಲಾಗಿದೆ. 943 ಫಲಿತಾಂಶ ಬಂದಿದೆ. ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70 ಮಂದಿ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ ಎಂದರು.

ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಎಲ್ಲರ ಗಂಟಲ ದ್ರವ ತಪಾಸಣೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು ಎಂದರು.

ಕ್ವಾರಂಟೈನ್‌ ಹೆಲ್ಪ್ಲೈನ್‌: ಜಿಲ್ಲೆಯಲ್ಲಿ ಒಟ್ಟು 52 ಕ್ವಾರಂಟೈನ್‌ ಕೇಂದ್ರಗಳಿದ್ದು, ನಾಲ್ಕು ಕೇಂದ್ರಗಳಿಗೆ ಒಬ್ಬರಂತೆ ನೋಡೆಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕ್ವಾರಂಟೈನ್‌ ಕೇಂದ್ರಗಳಲ್ಲಿರುವವರು ಅಹವಾಲು ಸಲ್ಲಿಸಲು 24×7 ಕಂಟ್ರೋಲ್‌ ರೂಂ ಆರಂಭಿಸಲಾಗಿದ್ದು, 08182-220082 ಸಂಖ್ಯೆಗೆ ಕರೆ ಮಾಡಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.

Advertisement

ಪ್ರಕರಣ ದಾಖಲು: ಕೋವಿಡ್‌ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪಾಸಿಟಿವ್‌ ಬಂದಿರುವ ವ್ಯಕ್ತಿಗಳ ವೈಯಕ್ತಿಕ ಮಾಹಿತಿ ಸೋರಿಕೆ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ಕರ್ತವ್ಯದಲ್ಲಿದ್ದ ತಂಡವನ್ನು ಈಗಾಗಲೇ ಬದಲಾಯಿಸಲಾಗಿದೆ. ಈ ವರದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.

ಮನವಿ: ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರೂ, ಯಾರೂ ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಅಂತರ ಜಿಲ್ಲಾ ಪಯಣಕ್ಕೆ ಪಾಸ್‌ ಬೇಡ
ರಾಜ್ಯದಲ್ಲಿ ಲಾಕ್‌ಡೌನ್‌ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್‌ ಅಗತ್ಯವಿಲ್ಲ. ಖಾಸಗಿ ವಾಹನಗಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next