Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಜ್ಜು

01:17 PM Jun 17, 2020 | Naveen |

ಶಿವಮೊಗ್ಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂ. 25ರಿಂದ ಜು. 4ರವರೆಗೆ ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಕೋವಿಡ್ ಸೋಂಕು ಹರಡದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್‌.ಎಂ. ರಮೇಶ್‌ ಹೇಳಿದರು.

Advertisement

ಮಂಗಳವಾರ ಎಸ್‌.ಎಸ್‌.ಎಲ್‌.ಸಿ. ಪರೀಕ್ಷಾ ಪೂರ್ವಸಿದ್ಧತೆಗಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು ಕೈಗೊಂಡ ಕ್ರಮಗಳ ಕುರಿತು ಸುದ್ದಿಗಾರರಿಗೆ ಅವರು ವಿವರ ನೀಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 12,287 ವಿದ್ಯಾರ್ಥಿಗಳು ಹಾಗೂ 11,956 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 24,243 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ ಭದ್ರಾವತಿ ತಾಲೂಕಿನ 4,607, ಹೊಸನಗರ ತಾಲೂಕಿನ 1,629, ಸಾಗರ ತಾಲೂಕಿನ 2,878, ಶಿಕಾರಿಪುರ ತಾಲೂಕಿನ 3,697, ಶಿವಮೊಗ್ಗ ತಾಲೂಕಿನ 7164, ಸೊರಬ ತಾಲೂಕಿನ 2578 ಹಾಗೂ ತೀರ್ಥಹಳ್ಳಿ ತಾಲೂಕಿನ 1,690 ವಿದ್ಯಾರ್ಥಿಗಳಿದ್ದಾರೆ ಎಂದರು.

ಪರೀಕ್ಷೆ ನಡೆಸಲು ಈ ಹಿಂದೆ 1050 ಕೊಠಡಿ ನಿಗ ದಿಪಡಿಸಲಾಗಿತ್ತು. ಆದರೆ ಪ್ರಸಕ್ತ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಹೆಚ್ಚುವರಿಯಾಗಿ 202 ಕೊಠಡಿಗಳು ಸೇರಿದಂತೆ ಒಟ್ಟು 84 ಪರೀಕ್ಷಾ ಕೇಂದ್ರಗಳಲ್ಲಿ 1252 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಶೇಷ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 8 ಕಂಟೇನ್ಮೆಂಟ್‌ ಝೋನ್‌ಗಳಿಂದ ಪರೀಕ್ಷೆಗೆ ಹಾಜರಾಗುವ 250 ವಿದ್ಯಾರ್ಥಿಗಳಿಗಾಗಿ ವಿಶೇಷ ಕೊಠಡಿ ಸ್ಥಾಪಿಸಲಾಗಿದೆ. ಅಂತಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಅಂತರಕ್ಕಿಂತ ಹೆಚ್ಚಿನ ಅಂತರದಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಹಾಜರಿದ್ದು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ನಡೆಸುವ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಬೇಕು. ಪ್ರತಿ ವಿದ್ಯಾರ್ಥಿಗೆ ಸ್ವಯಂ ಸೇವಾಸಂಸ್ಥೆಗಳು ನೀಡಿರುವ 2 ಮಾಸ್ಕ್ ಹಾಗೂ ದೈನಂದಿನ ಬಳಕೆಗೆ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲವು ಸಂದರ್ಭದಲ್ಲಿ ದೂರದ ಊರಿನಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯವಿದ್ದಲ್ಲಿ ಉಪಾಹಾರ ನೀಡುವ ಕ್ರಮವಾಗಿ ಒಂದು ಬಿಸ್ಕಿತ್‌ ಪ್ಯಾಕೇಟ್‌ನ್ನು ಹಾಗೂ ಕುಡಿಯುವ ನೀರನ್ನು ಒದಗಿಸಲಾಗುವುದು. ಇದರ ವ್ಯವಸ್ಥಿತ ನಿರ್ವಹಣೆಗಾಗಿ ಸ್ಕೌಟ್‌ ಮತ್ತು ಗೈಡ್ಸ್‌ನ 375 ಸ್ವಯಂ ಸೇವಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಅಂತೆಯೇ ವಿದ್ಯಾರ್ಥಿಯು ರಾಜ್ಯದ ಯಾವುದೇ ಮೂಲೆಯಲ್ಲಿದ್ದರೂ ಅವರಿರುವ ಸ್ಥಳದಿಂದಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ಬಳಸಿಕೊಂಡು ಶಿವಮೊಗ್ಗ ಜಿಲ್ಲೆಯ 743 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿ ಹಾಗೂ ಹೊರ ಜಿಲ್ಲೆಯ 668 ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಬಳಸಿಕೊಂಡು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತೂಮ್ಮೆ ಪುನರ್‌ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು, 3745ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಾಲ್ನಡಿಗೆಯಲ್ಲಿ, 10,940 ಮಕ್ಕಳು ತಮ್ಮ ಪೋಷಕರ ನೆರವಿನೊಂದಿಗೆ, 548 ಮಕ್ಕಳು ಶಾಲಾ ವಾಹನದಲ್ಲಿ, 752 ಮಕ್ಕಳು ರೂಟ್‌ ಬಸ್‌ನಲ್ಲಿ ಹಾಗೂ 586 ಮಕ್ಕಳ ಹಾಸ್ಟೆಲ್‌ನಲ್ಲಿದ್ದು ಪರೀಕ್ಷಾ ಕೇಂದ್ರಕ್ಕೆ ಬರಲಿದ್ದಾರೆ. ಯಾವುದೇ ಸೌಲಭ್ಯವಿಲ್ಲದಿರುವ 4097 ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದು ಸುರಕ್ಷಿತವಾಗಿ ಮನೆಗೆ ತಲುಪಿಸಲು 189ಶಾಲೆಗಳ 252 ಖಾಸಗಿ ಶಾಲಾ ವಾಹನಗಳು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ 104 ಬಸ್ಸುಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅವುಗಳಲ್ಲಿಯೂ 5 ಬಸ್ಸುಗಳನ್ನು ತುರ್ತು ಸಂದರ್ಭಗಳಿಗಾಗಿ ಕಾಯ್ದಿರಿಸಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next