■ ಉದಯವಾಣಿ ಸಮಾಚಾರ
ಶಿವಮೊಗ್ಗ: ರಾಜ್ಯದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದೆ. ರಾಜ್ಯವನ್ನು ದಿವಾಳಿ ಅಂಚಿಗೆ ತೆಗೆದುಕೊಂಡು ಹೋಗುತ್ತಿದೆ. ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಿಂದ ಒಂದೇ ವರ್ಷದಲ್ಲಿ ಆರ್ಥಿಕ ಸಂಕಷ್ಟ
ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ. ಪ್ರತಿಯೊಂದರ ದರ ಏರಿಕೆ ಮಾಡುತ್ತಿದ್ದಾರೆ.
ಅಬಕಾರಿ ದರ ಸಹ ಜಾಸ್ತಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದನ್ನು ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಾತೆತ್ತಿದರೆ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುತ್ತಾರೆ. ಅನುಭವಿ ಮುಖ್ಯಮಂತ್ರಿಗಳು ಇಂದು ಪರದಾಡುತ್ತಿದ್ದಾರೆ. ಇದರ ಮಧ್ಯೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಒಂದು ಕಡೆ ಭ್ರಷ್ಟಾಚಾರ ಇನ್ನೊಂದು ಕಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಜನ ಸಾಮಾನ್ಯರ ಪಾಲಿಗೆ ಸರ್ಕಾರ ಸತ್ತು ಹೋಗಿದೆ. ಆರ್ಥಿಕ ಶಕ್ತಿ ಕೊಡುವ ಯೋಜನೆಯ ಹಣ ನುಂಗಿ ಭ್ರಷ್ಟಾಚಾರ ಮಾಡಲಾಗಿದೆ.
ಜಿಲ್ಲಾಧಿ ಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಗುರುವಾರ ರಸ್ತೆ ತಡೆ ಹೋರಾಟ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ. ಸರ್ಕಾರದ ಹಣ ಎಲ್ಲಿಗೆ ಹೋಗುತ್ತಿದೆ. ನಿಮ್ಮ ಸರ್ಕಾರ ಬಂದ ಮೇಲೆ ಎಷ್ಟು ಕಿಮೀ ರಸ್ತೆ ಮಾಡಿದ್ದೀರಾ? ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿ ಹೋಗಿದೆ. ಪೆಟ್ರೋಲ್ ದರ ಇಳಿಸೋವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು.