ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಇದು ಉತ್ತಮ ಅವಕಾಶವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಚುನಾವಣಾ ಶಾಖೆ ಸಿಬ್ಬಂದಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ವಿದ್ಯಮಾನವಾಗಿದೆ. ಎಲ್ಲರ ಸಹಭಾಗಿತ್ವದಿಂದ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಪ್ರಮುಖ ಕಾರ್ಯವಾಗಿದೆ. ಎಲ್ಲಾ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಮಾತ್ರವಲ್ಲದೆ, ಮತದಾರರ ಪಟ್ಟಿಯಲ್ಲಿರಬಹುದಾದ ದೋಷಗಳನ್ನು ಸರಿಪಡಿಸುವುದು, ಮತದಾರರ ವೈಯಕ್ತಿಕ ಮಾಹಿತಿಯನ್ನು ಪಡೆದುಕೊಂಡು ಅವರೊಂದಿಗೆ ಸಂಪರ್ಕ ಸಾಧಿಸುವುದು ಸಹ ಈ ವಿಶೇಷ ಅಭಿಯಾನದ ಉದ್ದೇಶವಾಗಿದೆ ಎಂದರು.
ಎಲ್ಲಾ ಬಿಎಲ್ಒಗಳು ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಬೇಕು. ಇದಕ್ಕಾಗಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಕುರಿತು ತರಬೇತಿ ನೀಡಲಾಗಿದೆ. ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಕೆಯಿಂದ ನಿಖರ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಿದೆ. ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಬಿಎಲ್ಒಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು ಅರ್ಜಿ ನಮೂನೆ-06, ಬೇರೆ ಕಡೆ ಹೋಗಿರುವ ಮತದಾರರ ಹೆಸರು ತೆಗೆದು ಹಾಕಲು ನಮೂನೆ-07, ತಿದ್ದುಪಡಿಗಾಗಿ ನಮೂನೆ 08ರಲ್ಲಿ ಮಾಹಿತಿ ಪಡೆಯಬೇಕು. ಮನೆಯ ಎಲ್ಲಾ ಸದಸ್ಯರ ಹೆಸರು ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರಚಿಸಬಹುದಾದ ಮತಗಟ್ಟೆಗಳ ಕುರಿತು ಸರ್ಕಾರಿ ಕಟ್ಟಡಗಳ ಮಾಹಿತಿ ಸಂಗ್ರಹಿಸಬೇಕು. ಒಂದು ಜನವರಿ 2020ಕ್ಕೆ ಅನ್ವಯವಾಗುವಂತೆ ಒಂದು ಜನವರಿ 2002ರ ಪೂರ್ವದಲ್ಲಿ ಜನಿಸಿದವರ ಮಾಹಿತಿಯನ್ನು ಸಂಗ್ರಹಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿ, ಶಿವಮೊಗ್ಗ ಉಪ ವಿಭಾಗಾಧಿಕಾರಿ ಪ್ರಕಾಶ್, ಎಲ್ಲಾ ತಹಶೀಲ್ದಾರ್‌ಗಳು, ತಾಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಬಿಇಒಗಳು ಮತ್ತಿತರ ಅಧಿಕಾರಿಗಳು ತರಬೇತಿಯಲ್ಲಿ ಇದ್ದರು.