ಶಿವಮೊಗ್ಗ: ಗ್ರಾಮೀಣ ಮಟ್ಟದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಅವರು 4 ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೊರೊನಾ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೊರೊನಾ ಪಾಸಿಟಿವಿಟಿ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ ಎಂದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 17 ಕೋವಿಡ್ ಕೇರ್ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.
ಕೊರೊನಾ ಸೋಂಕಿತರು ಕಡ್ಡಾಯವಾಗಿ ಕೇರ್ ಸೆಂಟರ್‌ನಲ್ಲಿ ದಾಖಲಾಗಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ಗೆ ಅನುಮತಿ ನೀಡದಿರುವಂತೆ ತಿಳಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ತಲಾ ನಾಲ್ಕು ವಾರ್ಡ್‌ಗಳಿಗೆ ಒಂದರಂತೆ ಒಟ್ಟು 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್‌ಗಳು ಜವಾಬ್ದಾರಿ ತೆಗೆದುಕೊಂಡು ಸ್ವತ್ಛತೆ ಇತ್ಯಾದಿ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.
ವಿಡಿಯೋ ಸಂವಾದ: ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಎ.ಕೆ.ಭಾಸ್ಕರ್ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದರು. ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮದುವೆ, ಮುಂಜಿ, ಜಾತ್ರೆಯಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಕೋವಿಡ್ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಯಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಅವರು ತಿಳಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾಸ್ಕರ್ ಅವರು ಮಾಹಿತಿ ನೀಡಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಇದುವರೆಗೆ 51 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಟಾಸ್ಕ್ಫೋರ್ಸ್ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಪಾಸಿಟಿವ್ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ನೀಡಲಾಗುತ್ತಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಎಸ್ಪಿ ಲಕೀ ಪ್ರಸಾದ್ ಉಪಸ್ಥಿತರಿದ್ದರು.