ಸಾಗರ: ದೇಶ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತಪರವಾದ ತಮ್ಮ ನಿಜವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದು, ಸುಮಾರು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ರೈತರಲ್ಲಿ ಆತ್ಮಸ್ಥೈರ್ಯ ವೃದ್ಧಿಸುವ ಕೆಲಸ ಮಾಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮೋದಿ ಅವರು ರೈತಪರವಾಗಿ ನಿಂತಿದ್ದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಸಂದರ್ಭದಲ್ಲಿ ಸುಮಾರು 20 ವರ್ಗದವರಿಗೆ 720 ಕೋಟಿ ರೂಪಾಯಿ ಎರಡನೇ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನತೆಯ ಪರವಾಗಿ ಇಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಕೊರೊನಾ ನಡುವೆಯೂ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆದಿವೆ. ಕೇಂದ್ರ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 2021-22ನೇ ಸಾಲಿನ ರಸ್ತೆ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಬಿಡುಗಡೆಯಾಗಿದೆ. ಹೆಚ್ಚುವರಿ ಅನುದಾನಕ್ಕೆ ಪ್ರಯತ್ನಿಸಲಾಗುತ್ತಿದೆ.
ವಿವಿಧ ಯೋಜನೆಗಳ ಡಿಪಿಆರ್‌ಗೆ ಅಗತ್ಯ ಹಣ ಬಿಡುಗಡೆಯಾಗಿದೆ. ಸಾಗರದ ಬಿಎಚ್ ರಸ್ತೆ ಅಗಲೀಕರಣಕ್ಕೆ 77 ಕೋಟಿ ರೂ. ಮಂಜೂರಾಗಿದ್ದು, ಈ ವಾರದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.
ಶಾಸಕ ಎಚ್.ಹಾಲಪ್ಪ ಮಾತನಾಡಿ, ಉಪವಿಭಾಗೀಯ ಆಸ್ಪತ್ರೆಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಆರ್‌ಟಿಪಿಸಿಆರ್ ಮಾದರಿ ತಪಾಸಣಾ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಸಂಘ ಪರಿವಾರದ ಸಂಪರ್ಕ ಪ್ರಮುಖ್ ಆರಗ ಚಂದ್ರಶೇಖರ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಲೋಕನಾಥ್ ಬಿಳಿಸಿರಿ, ಕೆ.ಆರ್. ಗಣೇಶಪ್ರಸಾದ್, ಚೇತನರಾಜ್ ಕಣ್ಣೂರು ಇನ್ನಿತರರು ಇದ್ದರು.