Advertisement

3ನೇ ಅಲೆ ಎದುರಿಸಲು ಸರ್ಕಾರದಿಂದ ಸಿದ್ಧತೆ

09:52 PM Jun 13, 2021 | Shreeraj Acharya |

ಶಿವಮೊಗ್ಗ: ಕೊರೊನಾ ಮೂರನೇ ಅಲೆ ಎದುರಿಸಲು ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನ ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್‌ ನಿರ್ವಹಣೆ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ಡಾ|ದೇವಿಪ್ರಸಾದ್‌ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯೊಂದನ್ನು ಈಗಾಗಲೇ ರಚಿಸಲಾಗಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ಈ ವರದಿ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಬೆಡ್‌ ಗಳ ಮಕ್ಕಳ ಐಸಿಯು ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮ ಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ 1780 ವೈದ್ಯರನ್ನು ನೇರ ನೇಮಕಾತಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೂಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಜ್ಞರ ಸಮಿತಿಯಿಂದ ಆಡಿಟ್‌: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್‌ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್‌ ನಡೆಸಿ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಮರಣ ಪ್ರಮಾಣ ಹೆಚ್ಚಿರುವ ಕಾರಣ ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿ ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72 ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ|ಸುಧಾಕರ್‌ ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್‌ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ಗೆ ಅವಕಾಶ ನೀಡದೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿಯೇ ಪೀಡಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಮೂಲ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಡಿ ಗ್ರೂಪ್‌ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಜಿಲ್ಲೆಯ ಕೋವಿಡ್‌ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ನೀಡಿದರು. ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next