ಸಾಗರ: ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ನೆಟ್‌ವರ್ಕ್ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಸಚಿವರ ಗಮನ ಸೆಳೆದಿದ್ದೇನೆ. ಸಂಸದರ ಗಮನಕ್ಕೂ ತಂದಿದ್ದೇನೆ.
ಆದರೆ ವಿದ್ಯಾರ್ಥಿಗಳ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಎಚ್ಚರಿಕೆ ನೀಡಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸ್ಮಾರ್ಟ್‌ಕ್ಲಾಸ್, ಪದವಿ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗೆ ಕೋವಿಡ್ ಪ್ರತಿಬಂಧಕ ಲಸಿಕೆ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿಗಳನ್ನು ವಿತರಣೆ ಮಾಡಿ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಬಾರದು.
ಮಲೆನಾಡಿನ ಗ್ರಾಮೀಣ ಪ್ರದೇಶದಲ್ಲಿ ನೆಟ್‌ವರ್ಕ್ ಇಲ್ಲ. ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿ ಕೊಟ್ಟೂ ಪ್ರಯೋಜನ ಇಲ್ಲದಂತೆ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಕಾಲೇಜಿನಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಯನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಥಮ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಟ್ಯಾಬ್ ಪಿಸಿ ಒದಗಿಸಲಾಗಿದೆ ಎಂದು ಹೇಳಿದರು.
ಪ್ರಾಚಾರ್ಯ ಪ್ರೊ| ಕರುಣಾಕರ ಬಿ. ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಮ್, ತಾಲೂಕು ಆರೋಗ್ಯಾ ಧಿಕಾರಿ ಡಾ| ಮೋಹನ್ ಕೆ.ಎಸ್., ಟಿ.ಡಿ.ಮೇಘರಾಜ್ ಇನ್ನಿತರರು ಇದ್ದರು.
ಭಾಗ್ಯ ಎನ್. ಪ್ರಾರ್ಥಿಸಿದರು. ಚರಣರಾಜ್ ಜೆ.ಎಚ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶೋಕ್ ಕೆ.ಎಂ. ವಂದಿಸಿದರು. ಮಮತಾ ವಿ. ಹೆಗಡೆ ನಿರೂಪಿಸಿದರು.