Advertisement

ಸಿಇಟಿ ಪರೀಕ್ಷೆಗೆ ಸುಗಮ ವ್ಯವಸ್ಥೆ ಕಲ್ಪಿಸಿ

05:30 PM Apr 26, 2019 | Naveen |

ಶಿವಮೊಗ್ಗ: ಏ. 29 ಮತ್ತು 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ.) ಜಿಲ್ಲೆಯ 17 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ತಿಳಿಸಿದರು.

Advertisement

ಸಿ.ಇ.ಟಿ. ಪರೀಕ್ಷಾ ಸಿದ್ಧತೆ ಬಗ್ಗೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಶಿವಮೊಗ್ಗದಲ್ಲಿ 12, ಭದ್ರಾವತಿಯಲ್ಲಿ 3 ಹಾಗೂ ಸಾಗರದಲ್ಲಿ 2 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 6807ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳ ಬಂಡಲ್ಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಹಾಗೂ ಪರೀಕ್ಷಾ ನಂತರ ಒ.ಎಂ.ಆರ್‌. ಗಳನ್ನು ಖಜಾನೆಯಲ್ಲಿ ಇರಿಸಲು ಒಟ್ಟು 4 ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ವೀಕ್ಷಕರ ನೇಮಕ ಮಾಡಲಾಗಿದೆ. ಅವರು ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 9 ಗಂಟೆಗೆ ಹಾಜರಿದ್ದು ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಂಬಂಧ ನಿಯೋಜಿಸಲ್ಪಟ್ಟಿರುವ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಯಾರೂ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸದಂತೆ ಮೇಲ್ವಿಚಾರಕರು ಹಾಗೂ ಪೊಲೀಸ್‌ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಯಾವುದೇ ಅವ್ಯವಹಾರ ನಡೆಯದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸೂಕ್ತ ತರಬೇತಿಯೊಂದಿಗೆ ಯಾವುದೇ ಗೊಂದಲ, ಅನುಮಾನಕ್ಕೆ ಅವಕಾಶವಾಗದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಇಮ್ತಿಯಾಜ್‌ ಅಹ್ಮದ್‌, ಜಿಲ್ಲಾ ಖಜಾನಾಧಿಕಾರಿ ಪಡಿಯಪ್ಪ, ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next