ಶಿವಮೊಗ್ಗ: ಕೇಂದ್ರ ಸರ್ಕಾರ ಹೊರತರಲು ಮುಂದಾಗಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಾಯ್ದೆ ವಿರುದ್ಧ ಜಿಲ್ಲೆಯಾದ್ಯಂತ ಬುಧವಾರ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಖಾಸಗಿ ಆಸ್ಪತ್ರೆ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳುಳ್ಳ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮುಂದಾಯಿತು. ದಿಢೀರ್ ಬಂದ್‌ನಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಹೀಗಾಗಿ, ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ನೀಡಲಾಗಿದ್ದ ರಜೆಯನ್ನು ರದ್ದು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು.
ಪ್ರತಿಭಟನೆ: ಕೇಂದ್ರ ಸರ್ಕಾರ ಹೊರತರಲು ಮುಂದಾಗಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಾಯ್ದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಐಎಂಎ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ|ಪಿ.ಕೆ.ಪೈ, ಡಾ|ಎಸ್.ಎಂ. ವೀರೇಶ್, ಡಾ| ಶ್ರೀಧರ್, ಡಾ| ಪುರುಷೋತ್ತಮ್, ಡಾ| ನರೇಂದ್ರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಕಾಯ್ದೆ ವಿರೋಧಿಸಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಪ್ರತಿಭಟನೆ ನಡೆಸಿ ತಾಲೂಕು ಆಡಳಿತದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಷ್ಕರಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಬೆಂಬಲಿಸದೆ ಎಂದಿನಂತೆ ಕಾರ್ಯನಿರ್ವಹಿಸಿದರು.