ಶಿವಮೊಗ್ಗ: ಜಿಲ್ಲೆಯ ಸಾರ್ವಜನಿಕ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ವಿಳಂಬ ಖಂಡಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಬುಧವಾರ ಜಿಲ್ಲಾಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈಗಾಗಲೇ 2019-20ನೇ ಸಾಲಿಗೆ ಶಾಲಾ- ಕಾಲೇಜುಗಳಿಗೆ ಪ್ರವೇಶ ಪ್ರಕ್ರಿಯೆ ಮುಗಿದಿದೆ. ಅರ್ಧವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳು ಹತ್ತಿರವಾಗುತ್ತಿವೆ. ಆದರೂ ಯಾವುದೇ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ನೀಡದಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
ಜಿಲ್ಲೆಯಲ್ಲಿರುವ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲು ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಬೇಕು. ಆದರೆ ಕಳೆದೊಂದು ತಿಂಗಳಿನಿಂದ ಎಲ್ಲಾ ಕ್ಷೇತ್ರಗಳ ಶಾಸಕರು ರೆಸಾರ್ಟ್‌ಗಳಲ್ಲಿ ಬೀಡುಬಿಟ್ಟಿರುವುದರಿಂದ ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರ ಸೇರಿದಂತೆ ಪಟ್ಟಣಗಳಿಗೆ ವಿದ್ಯಾಭ್ಯಾಸಕ್ಕೆ ಬರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರದ ವಿವಿಧ ವಸತಿ ನಿಲಯಗಳಲ್ಲೇ ಆಶ್ರಯ ಪಡೆಯಬೇಕು. ಈಗಾಗಲೇ ಬಹುತೇಕ ಶಾಲಾ- ಕಾಲೇಜುಗಳಿಗೆ ಪಾಠ ಪ್ರವಚನಗಳು ನಡೆಯುತ್ತಿವೆ. ಆದರೆ ಯಾವುದೇ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡದೆ ಇರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಹೋಗದೆ ಪಾಠ ಪ್ರವಚನಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿ ನಿಲಯಗಳ ಆಯ್ಕೆಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಿ ಪ್ರವೇಶಾತಿ ನೀಡಲು ಆದೇಶಿಸಬೇಕೆಂದು ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ. ಚೇತನ್, ಜಿಲ್ಲಾಧ್ಯಕ್ಷ ಎಚ್.ಎಸ್. ಬಾಲಾಜಿ, ವಿಜಯ್, ರಘು, ಅರ್ಜುನ್, ಎಚ್.ಎಲ್. ರವಿಕುಮಾರ್, ಜಿ. ರವಿಕುಮಾರ್, ಚೇತನ, ಗಿರೀಶ್, ಮಂಜು, ವಿನ್ಯಾಸ್, ಶಶಿ, ನಾಗ, ಫ್ರಾನ್ಸಿನ್, ರಾಹುಲ್, ಸಚಿನ್ ಇನ್ನಿತರರು ಇದ್ದರು.