ಶಿವಮೊಗ್ಗ: ಬೆಳಗಾವಿಯ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪದವಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಂಡಿಸಿ ಶನಿವಾರ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಒಂದಲ್ಲ ಒಂದು ಹಗರಣಗಳಲ್ಲಿ ಸಿಲುಕಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬದಲು ಸಮಸ್ಯೆಗಳ ಸರಮಾಲೆಯಾಗಿ ಎದ್ದು ನಿಂತಿದೆ. ಈ ವಿವಿಯ ಭ್ರಷ್ಠಾಚಾರ, ಮೌಲ್ಯಮಾಪನ, ಪರೀಕ್ಷಾ ಗೊಂದಲಗಳು, ಅಂಕಪಟ್ಟಿ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳ ನಡುವೆ ನರಳುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು.
ಇದೆಲ್ಲರ ನಡುವೆ ಮೊನ್ನೆಯಿಂದ ಆರಂಭವಾದ ಇಂಜಿನಿಯರಿಂಗ್ ಪರೀಕ್ಷೆಯ ಪ್ರತಿಯೊಂದು ಪ್ರಶ್ನೆ ಪತ್ರಿಕೆಯು ಸೋರಿಕೆಯಾಗುತ್ತಿರುವುದು ಖಂಡನೀಯ. ಪ್ರಶ್ನೆ ಪತ್ರಿಕೆಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ವಿದ್ಯಾರ್ಥಿಗಳಿಗೆ ತಲುಪಿಸಬೇಕಾದ ವಿವಿಯು ಇಂದು ಬೀದಿಯಲ್ಲಿ ಬಿಕಾರಿಯಾಗಿ ಪ್ರಶ್ನೆ ಪತ್ರಿಕೆಗಳು ಹರಿದಾಡುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ವಿವಿಯೇ ಇತಂಹ ಹಗರಣಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ ವಿಷಯ. ಪ್ರತಿಯೊಂದು ಪ್ರಶ್ನೆಪತ್ರಿಕೆ10 ಸಾವಿರ ರೂ.ಗೆ ಮಾರಾಟವಾಗುತ್ತಿರುವುದು ಬಯಲಾಗಿದೆ. ವಿವಿಯಲ್ಲಿ ಸ್ಟ್ರಾಂಗ್ ರೂಂ ಇತ್ಯಾದಿ ವ್ಯವಸ್ಥೆಗಳಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ವಿವಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟಪಡಿಸುತ್ತದೆ ಹಾಗೂ ವಿವಿಯು ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಾವಂತ ಹಾಗೂ ಪ್ರಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮುಂದೆಂದೂ ಈ ರೀತಿ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಹಾಗೂ ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಎಬಿವಿಪಿ ನಗರ ಕಾರ್ಯದರ್ಶಿ ಅರುಣ್‌ಕುಮಾರ್, ಸಚ್ಚಿನ್, ಸುಭಾಷ್, ಪ್ರಜ್ವಲ್, ವಿವೇಕ್, ಪ್ರೇವå, ಸಂಜಯ್ ವಹಿಸಿದ್ದು, ಡಿವಿಎಸ್ ಹಾಗೂ ಗುರುಕುಲ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.